ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ “ಸಾಮಾನ್ಯ ಪ್ರವೇಶ ಪರೀಕ್ಷೆ” (ಸಿಇಟಿ) ಬರೆಯುವ ಮುನ್ನ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ತೆಗೆಯಲಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಸಂಬಂಧ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಇಂದು ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಸ್.ಶ್ರೀರಂಗ ಅವರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯ ನಿರ್ವಾಹಕ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಿ ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿದ ವಿಚಾರಣೆಯನ್ನು ಜೂನ್.9ಕ್ಕೆ ಮುಂದೂಡಿದೆ.
ಅರ್ಜಿಯಲ್ಲಿ ಏನಿದೆ?: ರಾಜ್ಯದಲ್ಲಿ ವೃತ್ತಿಪರ ಶಿಕ್ಷಣದ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಇದೇ.16 ಮತ್ತು 17ರಂದು ರಾಜ್ಯದ ವಿವಿಧೆಡೆ ಪರೀಕ್ಷೆಗಳನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಪರೀಕ್ಷಾ ಕೊಠಡಿ ಪ್ರವೇಶಿಸುವ ಮುನ್ನ ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಪವಿತ್ರ ಜನಿವಾರ ಧರಿಸಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಅವರ ಪ್ರತಿರೋಧದ ನಡುವೆಯೂ ಬಲವಂತದಿಂದ ಕತ್ತರಿಸಿ ತೆಗೆಯಲಾಗಿದೆ. ತೆಗೆಯದೇ ಹೋದವರಿಗೆ ಪರೀಕ್ಷೆ ಬರೆಯುವ ಅವಕಾಶ ನಿರಾಕರಿಸಲಾಗಿದೆ” ಎಂದು ಅರ್ಜಿದಾರರು ದೂರಿದ್ದಾರೆ.





