ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗೂಂಡಾ, ರೌಡಿ ಎಂದು ಕರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯೂ ಆದ ಶಿಲ್ಪಾನಾಗ್ ನೋಟಿಸ್ ಜಾರಿ ಮಾಡಿದ್ದಾರೆ.
ಫ್ಲೈಯಿಂಗ್ ಸ್ಕ್ಯಾಡ್, ಸ್ಥಳೀಯ ಚುನಾವಣಾಧಿಕಾರಿ ಮತ್ತು ಮಾದರಿ ನೀತಿ ಸಂಹಿತೆ ಜಾರಿ ನೋಡೆಲ್ ಅಧಿಕಾರಿ ಅವರು ನೀಡಿರುವ ವರದಿಗಳ ಆಧಾರದಲ್ಲಿ ಹೇಳಿಕೆ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಶಿಲ್ಪನಾಗ್ ದೃಢಪಡಿಸಿದ್ದಾರೆ.
ಜಿಲ್ಲೆಯ ಹನೂರಿನಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಯತೀಂದ್ರ ಸಿದ್ದರಾಮಯ್ಯ ಅವರು ಗೃಹ ಸಚಿವ ಅಮಿತ್ ಶಾ ವಿರುದ್ಧ ಕಿಡಿ ಕಾರಿದ್ದರು. ಈ ವೇಳೆ ಅವರೊಬ್ಬ ಗೂಂಡಾ, ರೌಡಿ, ಗುಜರಾತ್‌ನಲ್ಲಿ ಅವರ ಮೇಲೆ ಕೊಲೆ ಪ್ರಕರಣಗಳಿವೆ. ಅಂತಹವರು ದೇಶದ ಉನ್ನತ ಸ್ಥಾನದಲ್ಲಿದ್ದಾರೆ ಎಂದು ಟೀಕಿಸಿದ್ದರು.