ರಾಜ್ಯ

ಜಾತಿ ಜನಗಣತಿ ಜಾಟಾಪಟಿ: ಆರ್.ಅಶೋಕ್‌ ಪ್ರಶ್ನೆಗಳಿಗೆ ಖಡಕ್‌ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿ ಜನಗಣತಿ ಜಾರಿ ಬಗ್ಗೆ ಅ.18ರಂದು ನಡೆಯುವ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ನಿನ್ನೆ( ಅ.7) ಹೇಳಿದ್ದರು. ಈ ವಿಚಾರವಾಗಿ ವಿಪಕ್ಷ ನಾಯಕ ಆರ್.‌ ಅಶೋಕ್‌ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿ, ಜಾತಿ ಜನಗಣತಿ ಜಾರಿ ಬಗ್ಗೆ ಸಿದ್ದರಾಮಯ್ಯರಿಗೆ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದರು. ಸದ್ಯ, ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿದ್ದ ಆರ್.ಅಶೋಕ್‌ ಪ್ರಶ್ನೆಗಳಿಗೆ ಖಡಕ್‌ ಉತ್ತರ ನೀಡಿದ್ದಾರೆ.

ಜಾತಿ ಜನಗಣತಿ ಬಗ್ಗೆ ಬಿಜೆಪಿಯಿಂದ ಯಾವ ತಕರಾರು, ವಿರೋಧ ಇಲ್ಲ. ಅದರ ಅನುಷ್ಠಾನಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂಬ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆಯನ್ನು ಓದಿ ಮನಸ್ಸು ನಿರಾಳವಾಯಿತು ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಮುಂದುವರೆಸಿ, ಅಶೋಕ್ ಅವರೇ ನಮ್ಮ ಪಕ್ಷದೊಳಗಿನ ತಕರಾರುಗಳ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗಬೇಡಿ, ಅವುಗಳನ್ನು ನಾವು ಬಗೆಹರಿಸಿಕೊಳ್ಳುತ್ತೇವೆ. ನೀವು ನುಡಿದಂತೆ ನಡೆದರೆ ಜಾತಿ ಜನಗಣತಿ ಜಾರಿಯಾಗಿ ನೀವೇ ಹೇಳಿಕೊಂಡಿರುವ ನಿಮ್ಮ ಪಕ್ಷದ ಕನಸಿನ ‘ಅಂತ್ಯೋದಯ’ ಸಾಕಾರಗೊಳ್ಳುತ್ತದೆ ಎಂಬ ವಿಶ್ವಾಸ ನನಗಿದೆ. ನೀವು ಮಾತ್ರ, ಕೊಟ್ಟ ಮಾತಿಗೆ ತಪ್ಪಿ ನಡೆಯಬಾರದು ಅಷ್ಟೇ. 2018ರಲ್ಲಿ ಸಮೀಕ್ಷೆ ಪೂರ್ಣಗೊಂಡಿದ್ದರೂ ಅಂಕಿಅಂಶಗಳ ಪರಿಶೀಲನಾ ಕಾರ್ಯ ಪೂರ್ಣಗೊಳ‍್ಳದೇ ಇದ್ದ ಕಾರಣ ಆ ಅವಧಿಯಲ್ಲಿ ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಇದಕ್ಕೆ ಬೇರೆ ಯಾವ ಕಾರಣಗಳೂ ಇರಲಿಲ್ಲ. ಈಗ ವರದಿ ಬಿಡುಗಡೆಗೆ ಸಿದ್ಧವಾಗಿದೆ. ಅದನ್ನು ಅಂಗೀಕರಿಸಲು ನಮ್ಮ ಪಕ್ಷ ಮತ್ತು ಸರ್ಕಾರ ಕೂಡಾ ಬದ್ಧವಾಗಿದೆ’ ಎಂದಿದ್ದಾರೆ.

‘ನಮ್ಮ ಪಕ್ಷದ ಎಲ್ಲ ನಾಯಕರು ತಾತ್ವಿಕವಾಗಿ ಜಾತಿಗಣತಿಯನ್ನು ಒಪ್ಪಿಕೊಂಡಿದ್ದಾರೆ. ಯಾರ ವಿರೋಧವೂ ಇಲ್ಲ. ವಿರೋಧ ಪಕ್ಷಗಳ ಸುಳ್ಳು ಪ್ರಚಾರದಿಂದಾಗಿ ಕೆಲವರಲ್ಲಿ ನಿರಾಧಾರವಾದ ಸಂಶಯಗಳು ಹುಟ್ಟಿಕೊಂಡಿವೆ, ಇನ್ನು ಕೆಲವರಲ್ಲಿ ತಪ್ಪು ಅಭಿಪ್ರಾಯಗಳಿಂದಾಗಿ ಗೊಂದಲಗಳಿವೆ. ಮಠಾಧೀಶರು ಸೇರಿದಂತೆ ಎಲ್ಲರ ಅನುಮಾನ-ಸಂಶಯಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಂಡು ಜಾತಿ ಗಣತಿ ವರದಿಯನ್ನು ಜಾರಿಗೆ ತರುವ ನಿರ್ಧಾರವನ್ನು ಶೀಘ್ರವಾಗಿ ಕೈಗೊಳ್ಳಲಾಗುವುದು. ಕಾಂತರಾಜ್ ಆಯೋಗ ನಡೆಸಿದ್ದ ಜಾತಿಗಣತಿಯ ವರದಿ ಇಲ್ಲಿಯ ವರೆಗೆ ಬಿಡುಗಡೆಯಾಗಿಲ್ಲ. ನಾನು ಕೂಡಾ ಅದನ್ನು ಓದಿಲ್ಲ. ಹೀಗಿರುವಾಗ ಆರ್.ಅಶೋಕ್ ಅವರು ವರದಿ ಬಿಡುಗಡೆಯಾಗುವ ಮೊದಲೇ ಅದು ವೈಜ್ಞಾನಿಕವಾಗಿ ನಡೆದಿಲ್ಲ, ಅದರಲ್ಲಿ ತಪ್ಪುಗಳಿವೆ ಎಂದು ಆರೋಪಿಸುತ್ತಿದ್ದಾರೆ. ವರದಿ ಅವರಲ್ಲಿದೆಯೇ? ಯಾವ ಆಧಾರದಲ್ಲಿ ಅವರು ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎನ್ನುವುದನ್ನು ಅವರೇ ಸ್ಪಷ್ಟಪಡಿಸಬೇಕು’ ಎಂದು ತಿಳಿಸಿದ್ದಾರೆ.

ಈಗ ಏಕಾಏಕಿಯಾಗಿ ವರದಿಯನ್ನು ಬಿಡುಗಡೆಗೊಳಿಸುವುದು ದಿಢೀರ್ ನಿರ್ಧಾರ ಅಲ್ಲ, ನಮ್ಮ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದ ಇದರ ಬಗ್ಗೆ ಸಮಾಲೋಚನೆ ನಡೆಸುತ್ತಾ ಬಂದಿದ್ದೇವೆ. ನಾವು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಉಳ್ಳವರು, ಯಾವುದೇ ಚರ್ಚೆ-ಸಂವಾದ ಇಲ್ಲದೆ ದಿಢೀರ್ ನಿರ್ಧಾರ ಕೈಗೊಳ್ಳುವ ಸರ್ವಾಧಿಕಾರಿ ಧೋರಣೆ ನಮ್ಮದ್ದಲ್ಲ. ಸಾರ್ವಜನಿಕ ತೀರ್ಮಾನಗಳನ್ನು ಸಹಮತ ಮೂಡಿಸುವ ಮೂಲಕ ಕೈಗೊಳ್ಳಬೇಕೆಂಬ ಅಭಿಪ್ರಾಯ ನಮ್ಮದಾಗಿದೆ. ಇದರಿಂದಾಗಿ ಸ್ವಲ್ಪ ವಿಳಂಬವಾಗಿದೆ ಅಷ್ಟೇ’ ಎಂದು ಉಲ್ಲೇಖಿಸಿದ್ದಾರೆ.‌

‘ಇದು ಕೇವಲ ಜಾತಿ ಜನಗಣತಿ ಅಲ್ಲ. ಇದು ಸರ್ವರ ಒಳಿತಿಗಾಗಿ ನಡೆಸಲಾದ ರಾಜ್ಯದ ಏಳು ಕೋಟಿ ಜನತೆಯ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ. ಇದನ್ನು ಇಲ್ಲಿಯ ವರೆಗೆ ದಲಿತರಾಗಲಿ, ಹಿಂದುಳಿದ ಜಾತಿಯವರಾಗಲಿ ವಿರೋಧಿಸಿಲ್ಲ. ಹೀಗಿರುವಾಗ ಅವರಿಗೆ ಅವಮಾನವಾಗಿದೆ ಎಂದು ಹೇಗೆ ಹೇಳುತ್ತೀರಿ? ಜಾತಿ ಜನಗಣತಿ ವಿರುದ್ಧ ತಳ ಸಮುದಾಯಗಳನ್ನು ಎತ್ತಿಕಟ್ಟುವ ಉದ್ದೇಶ ನಿಮ್ಮದಾಗಿದ್ದರೆ ನಿಮಗೆ ನಿರಾಶೆ ಖಚಿತ’ ಎಂದಿದ್ದಾರೆ.

‘ಜಾತಿ ಗಣತಿ ನನ್ನ ಕನಸಿನ ಕೂಸು ಎಂದು ಹೇಳಲು ಯಾವ ಹಿಂಜರಿಕೆಯೂ ಇಲ್ಲ. 1992ರಲ್ಲಿ ಸುಪ್ರೀಂ ಕೋರ್ಟ್ ಮಂಡಲ ವರದಿಗೆ ಸಂಬಂಧಿಸಿದಂತೆ ನೀಡಿದ್ದ ಆದೇಶದಲ್ಲಿ ರಾಜ್ಯದಲ್ಲಿ ಶಾಶ್ವತ ಹಿಂದುಳಿದ ಆಯೋಗವನ್ನು ರಚಿಸಿ ಕಾಲಕಾಲಕ್ಕೆ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಬೇಕು ಎಂದು ಸೂಚಿಸಿತ್ತು. ಇದರಂತೆ 1995ರಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ ರಾಜ್ಯದಲ್ಲಿ ಶಾಶ್ವತ ಹಿಂದುಳಿದ ಜಾತಿಗಳ ಆಯೋಗ ರಚಿಸಿದ್ದೆ. 2014ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಸಮಸ್ತ ಜನತೆಯ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಲು ಆದೇಶ ನೀಡಿದ್ದೆ. ಇದು ದೇಶದಲ್ಲಿಯೇ ಪ್ರಥಮ ಪ್ರಯತ್ನ ಎಂದು ಹೇಳಲು ನನಗೆ ಹೆಮ್ಮೆಯಿದೆ’ ಎಂದು ಬರೆದುಕೊಂಡಿದ್ದಾರೆ.

‘ಜಾತಿ ಗಣತಿ ಬಗ್ಗೆ ತಕರಾರು ಇಲ್ಲ ಎಂದು ಹೇಳುತ್ತಿರುವ ಆರ್.ಅಶೋಕ್ ಅವರೇ, ನೀವು ಇದೇ ಮಾತನ್ನು ಪ್ರಧಾನಿ ಮೋದಿ ಅವರಿಗೆ ಹೇಳಿ ರಾಷ್ಟ್ರಮಟ್ಟದಲ್ಲಿ ಜನಗಣತಿಯ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವಂತೆ ಒತ್ತಡ ಹೇರಿ, ನಿಮ್ಮ ಬದ್ಧತೆ ಮತ್ತು ಸತ್ಯಸಂಧತೆಯನ್ನು ಸಾಬೀತುಪಡಿಸಿ. ಇಲ್ಲದೆ ಇದ್ದರೆ ನೀವು ಕೂಡಾ ಇತ್ತೀಚೆಗೆ ನಿಮ್ಮ ಮೇಲೆ ಬಂದಿರುವ ಆರೋಪಗಳಿಂದ ತಪ್ಪಿಸಿಕೊಳ್ಳಲು ವಿನಾಕಾರಣ ಜಾತಿ ಜನಗಣತಿಯ ವಿವಾದವನ್ನು ಪ್ರಸ್ತಾಪಿಸುತ್ತಿದ್ದೀರಿ ಎಂದು ಆರೋಪಿಸಬೇಕಾಗುತ್ತದೆ’ ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

56 mins ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

58 mins ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

1 hour ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

4 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

4 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

4 hours ago