Mysore
15
broken clouds

Social Media

ಬುಧವಾರ, 24 ಡಿಸೆಂಬರ್ 2025
Light
Dark

ಜಾತಿ ಜನಗಣತಿಯನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳಬಾರದು: ವಿಪಕ್ಷ ನಾಯಕ ಆರ್‌.ಅಶೋಕ್‌

ಬೆಂಗಳೂರು: ಜಾತಿ ಗಣತಿಯನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜಾತಿ ಜನಗಣತಿಯನ್ನು ಜಾರಿಗೆ ತರುವ ಬಗ್ಗೆ ಚಿಂತಿಸುತ್ತಿದ್ದು, ಈ ವಿಚಾರವಾಗಿ ಟ್ವೀಟ್‌ ಮಾಡಿರುವ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು, ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯದ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೇಳಲು, ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನ ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ ಎಂದು ಆರೋಪಿಸಿದ್ದಾರೆ.

ಈ ವೇಳೆ ನಾನು ಸಿಎಂ ಸಿದ್ದರಾಮಯ್ಯ ಅವರಿಗೆ ಕೆಲವು ಆತ್ಮಸಾಕ್ಷಿ ಪ್ರಶ್ನೆಗಳನ್ನು ಕೇಳುವುದಾದರೆ, ತಮಗೆ ನಿಜವಾಗಿಯೂ ಜಾತಿಗಣತಿಯ ಬಗ್ಗೆ ಬದ್ಧತೆ ಇದ್ದಿದ್ದರೆ, 2018ರಲ್ಲೇ ಕಾಂತರಾಜು ವರದಿಯನ್ನ ಏಕೆ ಸ್ವೀಕರಿಸಿ ಜಾರಿ ಮಾಡಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ಹತ್ತು ವರ್ಷಗಳ ಹಿಂದೆ ಕೈಗೊಂಡ ಜಾತಿ ಜನಗಣತಿ ವೈಜ್ಞಾನಿಕವಾಗಿ ನಡೆದಿಲ್ಲ. ಅನೇಕ ಜನರ ಮನೆಗಳಿಗೆ ಭೇಟಿಯೇ ನೀಡಿಲ್ಲ ಎಂಬ ದೂರುಗಳಿವೆ. ಹೀಗಿರುವಾಗ ಈ ವರದಿಯನ್ನು ರಾಜ್ಯದ ಜನತೆಯ ಮುಂದೆ ಮುನ್ನೆಲೆಗೆ ತರುವ ತರಾತುರಿ ಏಕೆ?, ಈ ಅವೈಜ್ಞಾನಿಕ ಜಾತಿ ಜನಗಣತಿ ವರದಿ ಸ್ವೀಕರಿಸದಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ. ಇದನ್ನು ಬೆಂಬಲಿಸಿ ಸ್ವತಃ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಸಹಿ ಮಾಡಿದ್ದರು. ಅಲ್ಲದೇ, ತಮ್ಮದೇ ಪಕ್ಷದ ಹಿರಿಯ ನಾಯಕರು, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪನವರೂ ಸಹ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಮುಡಾ ಮತ್ತು ವಾಲ್ಮೀಕಿ ಹಗರಣಗಳ ಸುಳಿಯಲ್ಲಿ ಸಿಲುಕಿ ಮುಜುಗರ ಅನುಭವಿಸುತ್ತಿರುವ ಪರಿಸ್ಥಿತಿಯಿಂದ ಜನರ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ವರದಿಯನ್ನ ಒಂದು ದಾಳವಾಗಿ ಬಳಸಲಾಗುತ್ತಿದೆಯೇ?, ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ? ಸಾಮಾಜಿಕ ನ್ಯಾಯವೆಂಬ ಪವಿತ್ರ ಪರಿಕಲ್ಪನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಆತ್ಮವಂಚನೆಯಲ್ಲವೇ? ಇದಕ್ಕೆಲ್ಲಾ ನೀವು ಅಕ್ಟೋಬರ್‌.18ರಂದು ನಡೆಯುವ ಸಂಪುಟ ಸಭೆಯಲ್ಲಿ ನಿಮ್ಮ ಉತ್ತರಗಳನ್ನು ನೀಡುತ್ತೀರಾ ಎಂದು ನಿರೀಕ್ಷಿಸುತ್ತೇನೆ ಎಂದು ಪೋಸ್ಟ್‌ ಮಾಡಿದ್ದಾರೆ.

 

Tags:
error: Content is protected !!