ಬೆಂಗಳೂರು: ದಕ್ಷಿಣ ರಾಜ್ಯಗಳ ತೆರಿಗೆ ಸಂಪತ್ತನ್ನು ಉತ್ತರಕ್ಕೆ ಸುರಿಯಲಾಗಿದೆ ಎಂದು ಇಂದಿನ ಕೇಂದ್ರ ಬಜೆಟ್ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ದೇಶದಲ್ಲೇ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ 2ನೇ ಸ್ಥಾನದಲ್ಲಿರುವ ಕರ್ನಾಟಕವನ್ನು ಅಭಿವೃದ್ಧಿಯಿಂದ ಸಂಪೂರ್ಣವಾಗಿ ಕಡೆಗಣಿಸಲಾಗಿದೆ.
ಕೇಂದ್ರ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ಅಭಿವೃದ್ಧಿಯನ್ನು ನಿರ್ಲಕ್ಷಿಸಲಾಗಿದೆ. ನೀರಾವರಿ ಯೋಜನೆಗಳನ್ನು ರೈತರ ಆದಾಯ ಹೆಚ್ಚಿಸುವಂತಹ ಬಲಿಷ್ಟವಾದ ಯೋಜನೆಗಳನ್ನು ರೂಪಿಸಿಲ್ಲ. ಯುವಕರ ನಿರುದ್ಯೋಗ ಸಮಸ್ಯೆಗೆ ಪರಿಹಾರಗಳಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದಲ್ಲಿ ಕರ್ನಾಟಕದ ಮೂವರು ಸಚಿವರಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಮತ್ತೊಮ್ಮೆ ಮೋಸ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಅನ್ನದಾತರು ಸಾಲದ ಹೊರೆ ತಾಳಲಾರದೇ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ರೈತರ ಕೃಷಿ ಸಾಲ ಮನ್ನಾ ಬಗ್ಗೆ ಈ ಬಜೆಟ್‌ನಲ್ಲಿ ಯಾವುದೇ ಘೋಷಣೆ ಮಾಡಿಲ್ಲ. ಬಜೆಟ್‌ನಲ್ಲಿ ಬಿಜೆಪಿ ಹಾಗೂ ಎನ್‌ಡಿಎಯೇತರ ರಾಜ್ಯಗಳಿಗೆ ಘೋರ ಅನ್ಯಾಯ ಮಾಡಲಾಗಿದೆ ಎಂದು ಕಿಡಿಕಾರಿದರು.