ಬೆಂಗಳೂರು: ಕಲಬುರ್ಗಿಯ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸಂಪುಟ ಸ್ಥಾನದಿಂದ ಕೈ ಬಿಡಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಆಗ್ರಹಿಸಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು(ಡಿಸೆಂಬರ್.28) ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಲಬುರ್ಗಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಟ್ಟಹಾಸ ಮಿತಿ ಮೀರಿದೆ. ತನ್ನ ಆಪ್ತರ, ಬೆಂಬಲಿಗರ ಮೂಲಕ ಮರಳು, ಟೈಲ್ಸ್ ಸೇರಿದಂತೆ ಎಲ್ಲಾ ರೀತಿಯ ದಂಧೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಲ್ಲದೇ ಕಲಬುರ್ಗಿ ಜಿಲ್ಲೆ ರಿಪಬ್ಲಿಕ್ ಆಫ್ ಕಲಬುರ್ಗಿ ಆಗಿದ್ದು, ಅಲ್ಲಿ ಅವರ ಆಡಳಿತ ವೈಖರಿಯೇ ಬೇರೆಯಾಗಿದೆ. ಹೀಗಾಗಿ ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರು ಕಲಬುರ್ಗಿ ಜಿಲ್ಲೆಯಲ್ಲಿ ತಮಗೆ ಬೇಕಾದವರನ್ನು ನೇಮಿಸಿಕೊಂಡು ದಂಧೆಗಳಲ್ಲಿ ತೊಡಗಿಸಿದ್ದಾರೆ. ಹಾಗಾಗಿ ಗುತ್ತಿಗಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಹುಶಃ ಮೃತ ಸಚಿನ್‌ಗೆ ಧೈರ್ಯ ಸಾಕಾಗಿಲ್ಲ ಎಂದೆನಿಸುತ್ತದೆ. ಆ ಕಾರಣಕ್ಕೆ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.





