ಬೆಂಗಳೂರು: ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ರಾಜ್ಯ ರಾಜಕಾರಣದಲ್ಲಿ ತೀವ್ರ ಬದಲಾವಣೆ ಆಗಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಆಶ್ಚರ್ಯಕರ ಬದಲಾವಣೆ ಆಗಲಿದೆ. ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ತಣ್ಣಗೆ ಬೀಸುತ್ತಿದೆ ಎಂದು ಹೇಳಿದರು.
ಇನ್ನು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರ ಇದ್ದು, ಆದರೂ ಸಿಎಂ ಸಿದ್ದರಾಮಯ್ಯ ರಾಜ್ಯಾದ್ಯಂತ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದಾರೆ. ಹಣ ಇಲ್ಲದಿದ್ದರೆ ಕಾಮಗಾರಿಗಳಿಗೆ ಚಾಲನೆ ನೀಡಲು ಆಗುತ್ತಿತ್ತಾ ಎಂದು ಪ್ರಶ್ನೆ ಮಾಡಿದ ಅವರು, ಬೇಡಿಕೆಗೆ ತಕ್ಕಂತೆ ಅನುದಾನ ಸಿಕ್ಕಿಲ್ಲವೆಂದು ಬೇಸರ ಇರಬಹುದು. ಆದರೆ ಆರ್ಥಿಕ ಲಭ್ಯತೆಗೆ ಅನುಗುಣವಾಗಿ ಯಾವುದೇ ತಾರತಮ್ಯ ಇಲ್ಲ. ಕ್ಷೇತ್ರಕ್ಕೆ ಅನುದಾನ ಕೊಟ್ಟಿಲ್ಲ ಅನ್ನೋದು ಸತ್ಯಕ್ಕೆ ದೂರವಾದ ಮಾತು ಎಂದು ಹೇಳಿದರು.





