ದಾವಣಗೆರೆ: ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಅವರನ್ನು ಕೆಳಗಿಳಿಸಿ, ಆ ಸ್ಥಾನಕ್ಕೆ ಬೇರೆ ನಾಯಕರನ್ನು ಕೂರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಬಣದ ನಾಯಕರು ಆಗಾಗ್ಗೆ ಚರ್ಚೆ ನಡೆಸುತ್ತಲೇ ಇದ್ದಾರೆ. ಈ ಹಿನ್ನೆಲೆಯಲ್ಲಿ ಮೊನ್ನೆಯಷ್ಟೇ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರೊಂದಿಗೆ ಡಿನ್ನರ್ ಮೀಟಿಂಗ್ ನಡೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ.
ಈ ಬೆನ್ನಲ್ಲೇ ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯಗಳ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನವೇ ಅಂತಿಮ. ಇದನ್ನು ಅವರೇ ತೀರ್ಮಾನ ಮಾಡುತ್ತಾರೆ ಎಂದರು.
ಇನ್ನು ಖಾಲಿ ಇರುವ ಸಚಿವ ಸ್ಥಾನಗಳನ್ನು ತುಂಬುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿ.ನಾಗೇಂದ್ರ ಅವರ ರಾಜೀನಾಮೆಯಿಂದ ಖಾಲಿಯಾಗಿರುವ ಸಚಿವ ಸ್ಥಾನವನ್ನು ತುಂಬುವ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದರು.
ಇನ್ನು ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಹಲವು ಸಚಿವರು ಸಭೆ ಸೇರಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ಊಟಕ್ಕೆ ಸೇರುವುದೇ ತಪ್ಪೇ ಎಂದು ಪ್ರಶ್ನಿಸಿದರು. ರಾಜಕಾರಣಿಗಳು ಊಟಕ್ಕೆ ಸೇರಿದರೆ ಅನೇಕ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.