ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ನಿಖಿಲ್ ಕುಮಾರಸ್ವಾಮಿ ಇಂದು(ಅ.25) ಮಧ್ಯಾಹ್ನ 1.30ಕ್ಕೆ ಚನ್ನಪಟ್ಟಣ ತಾಲ್ಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಆಯ್ಕೆಯಾಗಿದ್ದು, ಅಧಿಕೃತವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿಖಿಲ್ ಅವರ ಹೆಸರನ್ನು ಘೋಷಣೆ ಮಾಡಿದ್ದಾರೆ.
ಚನ್ನಪಟ್ಟಣ ತಾಲ್ಲೂಕು ಕಚೇರಿಗೆ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ಬೃಹತ್ ರ್ಯಾಲಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇನ್ನಿತರ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್ ಹೇಳಿದ್ದೇನು?
ಜೆ.ಪಿ.ನಗರದ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆಯಲ್ಲಿ ಸೋಲು ಗೆಲ್ಲುವೂ ಸರ್ವೇ ಸಾಮಾನ್ಯ. ಈ ಹಿಂದೆ ಎರಡೂ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಈ ಬಾರಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ಹೀಗಾಗಿ ಮೋದಿ ಅವರ ವಿಶ್ವಾಸಗಳಿಸುವ ಪ್ರಯತ್ನ ಮಾಡುತ್ತೇನೆ ಎಂದರು. ಕಳೆದ ಎರಡೂ ಬಾರಿಯಂತೆ ಈ ಬಾರಿಯೂ ಚಕ್ರವ್ಯೂಹ ಸಿದ್ಧವಾಗಿದೆ. ಇದನ್ನು ಬೇಧಿಸುವ ಶಕ್ತಿಯನ್ನು ಮೈತ್ರಿ ಪಕ್ಷದ ಕಾರ್ಯಕರ್ತರು ನೀಡುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.