ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಒಕ್ಕಲಿಗ ಸಮುದಾಯದ ಭದ್ರಕೋಟೆಯಾಗಿರುವ ಹಳೆ ಮೈಸೂರು ಭಾಗದಲ್ಲಿ ದೇವೇಗೌಡರ ಕುಟುಂಬದ ವಾರಸುದಾರನೆಂದು ಸಾಬೀತು ಪಡಿಸಲು ವೇದಿಕೆ ಸಜ್ಜಾಗಿದೆ.
ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ನಿನ್ನೆಯಿಂದ ಪಾದಯಾತ್ರೆ ಆರಂಭಿಸಿದ್ದಾರೆ.
ಈ ವೇದಿಕೆಯಿಂದಲೇ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಹಳೇ ಮೈಸೂರು ಭಾಗದಲ್ಲಿ ದೇವೇಗೌಡರ ಕುಟುಂಬದ ವಾರಸುದಾರನೆಂದು ಸಾಬೀತು ಪಡಿಸಲು ಎಲ್ಲಾ ತಯಾರಿ ನಡೆಸಲಾಗಿದೆ.
ಒಕ್ಕಲಿಗರ ನಾಯಕತ್ವದ ಮೇಲೆ ಹಿಡಿತ ತಪ್ಪಿದ್ದಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತೀವ್ರ ಆತಂಕಗೊಂಡಿದ್ದರು. ಇತ್ತೀಚೆಗೆ ನಡೆದ ಪಾದಯಾತ್ರೆಯ ಪೂರ್ವ ಸಿದ್ಧತಾ ಸಭೆಯಲ್ಲಿ ಪ್ರೀತಂಗೌಡ ವಿರುದ್ಧ ಎಚ್‌ಡಿಕೆ ಹರಿಹಾಯ್ದಿದ್ದರು. ಈ ವೇಳೆ ಪ್ರಹ್ಲಾದ್ ಜೋಶಿ ಹಾಗೂ ಬಿಜೆಪಿ ಕೇಂದ್ರ ನಾಯಕರು ಕುಮಾರಸ್ವಾಮಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು.
ಬಳಿಕ ಪಾದಯಾತ್ರೆಯ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಜೊತೆಗೂಡಿದರು. ಉಭಯ ಪಕ್ಷಗಳ ಕಾರ್ಯಕರ್ತರು ಇಬ್ಬರಿಗೂ ಭವ್ಯ ಸ್ವಾಗತ ನೀಡಿದರು.
ಪಾದಯಾತ್ರೆಯಲ್ಲಿ ತಂದೆಯ ಜವಾಬ್ದಾರಿಯನ್ನೆಲ್ಲಾ ತೆಗೆದುಕೊಂಡಿರುವ ನಿಖಿಲ್ ಕುಮಾರಸ್ವಾಮಿ ಅವರನ್ನು ಹಳೆ ಮೈಸೂರು ಭಾಗಕ್ಕೆ ವಾರಸುದಾರನಾಗಿ ನೇಮಿಸುವ ಎಲ್ಲಾ ಸಾಧ್ಯತೆಗಳು ಇವೆ.
ಇನ್ನು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಎನ್‌ಡಿಎ ನಿಖಿಲ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಗಳಿದ್ದು, ಜೆಡಿಎಸ್‌ನಲ್ಲಿ ನಿಖಿಲ್ ಕುಮಾರಸ್ವಾಮಿ ಓರ್ವ ಪ್ರಬಲ ರಾಜಕಾರಣಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.