ಚನ್ನಪಟ್ಟಣ: ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಕೂತು ಸುದೀರ್ಘ ಚರ್ಚೆ ನಡೆಸಿದ ಬಳಿಕವೇ ಚನ್ನಪಟ್ಟಣ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಎಲ್ಲಾ ಪಕ್ಷಗಳು ಸರ್ವ ರೀತಿಯಲ್ಲೂ ತಯಾರಿ ನಡೆಸಿವೆ. ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್ ಅಭ್ಯರ್ಥಿಯಾಗುವ ಕನಸು ಕಾಣುತ್ತಿದ್ದು, ಕಾಂಗ್ರೆಸ್‌ನಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಇನ್ನು ಜೆಡಿಎಸ್‌ನಿಂದ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರೇ ಚನ್ನಪಟ್ಟಣ ಉಪಚುನಾವಣೆಗೆ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ಇಂದು ಚನ್ನಪಟ್ಟಣಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ಸಂಬಂಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರೆಲ್ಲಾ ಕೂತು ಸುದೀರ್ಘ ಚರ್ಚೆ ನಡೆಸುತ್ತೇವೆ. ಚರ್ಚೆ ನಡೆಸಿದ ಬಳಿಕವೇ ಅಂತಿಮವಾಗಿ ಅಭ್ಯರ್ಥಿ ಆಯ್ಕೆ ಬಗ್ಗೆ ಒಮ್ಮತದ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.