ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿಯನ್ನೇ ಎಬ್ಬಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಆಕ್ರಮ ನಿವೇಶನ ಪಡೆದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಕುಟುಂಬಸ್ಥರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ.
ಈ ಮೂಲಕ ತಮ್ಮ ನಾಲ್ಕು ದಶಕಗಳ ಸಾರ್ವಜನಿಕ ಜೀವನದಲ್ಲಿ ಮೊದಲ ಬಾರಿಗೆ ಬಹುದೊಡ್ಡ ಅಗ್ನಿಪರೀಕ್ಷೆಗೆ ಗುರಿಯಾಗಿದ್ದ ಸಿದ್ದರಾಮಯ್ಯ ಕಾನೂನು ಸಮರದಲ್ಲಿ ಗೆಲುವು ಸಾಧಿಸಿದ್ದು, ವಿರೋಧಿಗಳು ಸೇರಿದಂತೆ ಸ್ವಪಕ್ಷೀಯರಿಗೂ ಸಂದೇಶವನ್ನು ರವಾನಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣದ ತನಿಖೆ ನಡೆಸಿದ್ದ ಮೈಸೂರು ಲೋಕಾಯುಕ್ತ ಎಸ್.ಪಿ ಉದೇಶ್ ಅವರು, ಇಂದು ಮುಚ್ಚಿದ ಲಕೋಟೆಯಲ್ಲಿ ಸುಮಾರು 11,200 ಪುಟಗಳ ವರಿದಿಯನ್ನು ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠಕ್ಕೆ ಸಲ್ಲಿಸಿದ್ದಾರೆ.
ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಫೆಬ್ರವರಿ.24 ಅಂದರೆ ಮುಂದಿನ ಸೋಮವಾರಕ್ಕೆ ಮುಂದೂಡಿದೆ. 50 ಜನರ ಹೇಳಿಕೆಗಳನ್ನು ದಾಖಲು ಮಾಡಿದ ಪೊಲೀಸರು 27 ಸಂಪುಟ, 11,200 ಪುಟಗಳ ತನಿಖಾ ವರದಿಯನ್ನು ಬಿ ರಿಪೋರ್ಟ್ ಎಂದೇ ಉಲ್ಲೇಖಿಸಿದ್ದಾರೆ.
ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ ಎಂಬುದು ತನಿಖೆಯಲ್ಲಿ ಕಂಡುಬಂದಿದೆ. ಅಲ್ಲದೆ, ಆರೋಪಕ್ಕೆ ಪೂರಕವಾಗಿ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ಬಿ-ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ.





