Mysore
28
few clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಆರೋಗ್ಯ ಕವಚ ಯೋಜನೆಯಡಿ 262 ಹೊಸ ಆಂಬ್ಯುಲೆನ್ಸ್‌ಗಳಿಗೆ ಸಿಎಂ ಚಾಲನೆ

ಬೆಂಗಳೂರು : ಆರೋಗ್ಯ ಕವಚ ಯೋಜನೆಯಡಿ 108 ಸೇವೆಯ ನೂತನ 262 ಆಂಬ್ಯುಲೆನ್ಸ್ ಸೇವೆಗಳನ್ನು ಗುರುವಾರ ವಿಧಾನಸೌಧ ಮುಂದೆ ಸಿಎಂ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಅಂಬ್ಯುಲೆನ್ಸ್ ಗಳನ್ನು ಅರ್ಪಿಸಿದರು.

ಬಳಿಕ ಮಾತನಾಡಿದ ಸಿದ್ದರಾಮಯ್ಯ, ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕೆನ್ನುವುದು ಸರ್ಕಾರದ ಗುರಿಯಾಗಿದೆ. ಪ್ರತಿಯೊಬ್ಬರನ್ನು ಮಾನವೀಯವಾಗಿ ನಡೆಸಿಕೊಂಡು ತಾರತಮ್ಯ ಮಾಡದೆ ಉತ್ತಮ ಆರೋಗ್ಯ ಸೇವೆ ನೀಡಬೇಕು ಎಂದು ಸಿಎಂ ಸೂಚಿಸಿದರು.

ನಾಡಿನ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ಧವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಹಾನಿಯಾಗುವುದನ್ನು ತಡೆಯಲು ತುರ್ತು 108 ಅಂಬ್ಯುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ. ಪ್ರತಿ ತಾಲ್ಲೂಕಿನಲ್ಲಿ 4 ಅಂಬ್ಯುಲೆನ್ಸ್ ಗಳು ಕಾರ್ಯನಿರ್ವಹಿಸುತ್ತಾ ತುರ್ತು ಆರೋಗ್ಯ ಸೇವೆ ಒದಗಿಸುತ್ತಿವೆ. ಸದ್ಯ ರಾಜ್ಯದಲ್ಲಿ 840ಕ್ಕೂ ಹೆಚ್ಚು ಅಂಬ್ಯುಲೆನ್ಸ್ ಗಳ ಅವಶ್ಯಕತೆಯಿದೆ ಎಂದು ಹೇಳಿದರು.

ಖಾಸಗಿ ಡಯಾಗ್ನೊಸ್ಟಿಕ್ ಸೆಂಟರ್‌ಗಳಲ್ಲಿ ಸೇವಾವೆಚ್ಚ ದುಬಾರಿಯಿಂದ ಬಡವರಿಗೆ ಕಷ್ಟವಾಗುತ್ತಿದೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳಲ್ಲೇ ಉತ್ತಮ‌ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವ ವಾತಾವರಣ ರಾಜ್ಯದಲ್ಲಿ ಸೃಷ್ಟಿ ಆಗುತ್ತಿದೆ. ಜಯದೇವ ಆಸ್ಪತ್ರೆಯಿಂದ ಉತ್ತಮ‌ಸೇವೆ ಸಾಧ್ಯ ಆಗಿರುವಾಗ ಉಳಿದ ಕಡೆಗಳಲ್ಲೂ ಅದೇ ಗುಣಮಟ್ಟದ ಸೇವೆ ಒದಗಿಸಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಪ್ರತೀ ಜಿಲ್ಲೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯ ಒದಗಿಸುವ ದಿಕ್ಕಿನಲ್ಲಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ ಎಂದು ತಿಳಿಸಿದರು.

ಇದೇ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ನಮ್ಮ ದೇಶದ ಇತರೆ ರಾಜ್ಯಗಳು ನಮ್ಮನ್ನು ಅನುಸರಿಸುತ್ತಿವೆ. 108 ಆ್ಯಂಬುಲೆನ್ಸ್​ಗೆ ಡಿಜಿಟಲೀಕರಣ ಅಳವಡಿಸಿಕೊಳ್ಳಬೇಕು. ಮೊದಲು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ಕೊಡಿಸಬೇಕು. ಯಾವ ಖಾಸಗಿ ಆಸ್ಪತ್ರೆಗಿಂತ ನಮ್ಮ ಸರ್ಕಾರಿ ಆಸ್ಪತ್ರೆ ಕಡಿಮೆ ಇಲ್ಲ ಎಂದರು. ರಾಜ್ಯದ ಎಲ್ಲಾ ಜಿಲೆಗಳಲ್ಲಿಯೂ ಮೆಡಿಕಲ್‌ ಕಾಲೇಜು ಸ್ಥಾಪಿಸಲಾಗಿದೆ ಎಂದು ಹೇಳಿದರು.

ಅಂಬ್ಯುಲೆನ್ಸ್‌ ಮಾಹಿತಿ : 82.02 ಕೋಟಿ ರೂಪಾಯಿ ವೆಚ್ಚದಲ್ಲಿ 262 ಆಂಬ್ಯುಲೆನ್ಸ್‌ ಗಳು ಖರೀದಿಸಲಾಗಿದೆ. 262 ಪೈಕಿ 157 ಅಂಬ್ಯುಲೆನ್ಸ್​ಗಳಲ್ಲಿ ಬಿಎಲ್ ಎಸ್ (Basic life support) ಹಾಗೂ 105 ಅಂಬ್ಯುಲೆನ್ಸ್ ಅಡ್ವಾನ್ಸ್ ಲೈಫ್ ಸಪೋರ್ಟ್ (ALS ) ಸೌಲಭ್ಯವಿದ್ದು, ಹೃದಯ ಮತ್ತು ಉಸಿರಾಟದ ತುರ್ತು ಪರಿಸ್ಥಿಗಳಲ್ಲಿ ಇವುಗಳನ್ನು ಬಳಸಲಾಗುವುದು.

ಈ ವರ್ಷ ಹೊಸ 188 ಇಂದಿರಾ ಕ್ಯಾಂಟೀನ್‌ ಸ್ಥಾಪನೆ : ಜನರಿಗೆ ಅನುಕೂಲ ಆಗುವ ದೃಷ್ಠಿಯಿಂದ  ಬೆಂಗಳೂರಿನಲ್ಲಿ 225 ವಾರ್ಡ್ ಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು. ಇದಲ್ಲದೇ ಅಗತ್ಯ ಇರುವ ಕಡೆ ಕ್ಯಾಂಟೀನ್ ಆರಂಭಿಸಲಾಗುವುದು. ಇಂದಿರಾ ಕ್ಯಾಂಟೀನ್‌ಗೆ ಜಾಗದ ಕೊರತೆ ಇರುವ ಕಡೆ ಸಂಚಾರಿ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು. ಈ ವರ್ಷ ಹೊಸದಾಗಿ 188 ಇಂದಿರಾ ಕ್ಯಾಂಟೀನ್‌ ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ