Mysore
24
haze

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಮುಡಾ ಹಗರಣದಲ್ಲಿ ಸಿಎಂ, ಮತ್ತವರ ಕುಟುಂಬದ ಪಾತ್ರವಿದೆ: ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ಹಾಗೂ ತಮ್ಮ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ದಾಖಲೆ ಸಮೇತವೇ ಉತ್ತರ ನೀಡಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು; ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವ ಮೂಡಾ ಪ್ರಸ್ತಾವನೆಯನ್ನು ನಿರಾಕರಿಸಿ ಬದಲಿ ಜಮೀನನ್ನೇ ನೀಡುವಂತೆ ಒತ್ತಾಯ ಮಾಡಿರುವ ದಾಖಲೆಯನ್ನು ಕೇಂದ್ರ ಸಚಿವರು ಬಿಡುಗಡೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ.. ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ ಎಂದು ದಾಖಲೆಯನ್ನು ಎಕ್ಸ್ ಖಾತೆಯಲ್ಲಿ ಟ್ಯಾಗ್ ಮಾಡಿದ್ದಾರೆ.

“50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ‘ಒತ್ತಾಯ’ ಮಾಡಿದ್ದಾರೆ!!” ಹಾಗೂ “ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ.” ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..? ಸೂಪರ್ ಸಿಎಂ ಅವರೇ ‘ಒತ್ತಾಯಿಸಿರುತ್ತಾರೆ!!!’ ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ. ಈಗ ಹೇಳಿ.. ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಅಥವಾ ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಎಂದು ಅವರು ಸಿಎಂಗೆ ತಿರುಗೇಟು ನೀಡಿದ್ದಾರೆ.

Tags:
error: Content is protected !!