Mysore
30
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

ರಾಜಕಾಲುವೆ ಒತ್ತುವರಿ ತೆರವಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

CM Siddaramaiah

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಬೆಂಗಳೂರು ನಗರದಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದರು.

ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರು ನಗರದಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ಭೈರತಿ ಸುರೇಶ್ ಹಾಗೂ ಇತರ ಜನಪ್ರತಿನಿಧಿಗಳೊಂದಿಗೆ ಹಾಗೂ ಎಲ್ಲಾ ಹಿರಿಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ.

ಮಾನ್ಯತಾ ಟೆಕ್ಪಾರ್ಕ್ ಬಳಿ ರಾಜಕಾಲುವೆ ಪರಿಶೀಲನೆ ನಡೆಸಿದ್ದು, ಅಲ್ಲಿ ರಾಜಕಾಲುವೆ ಒತ್ತುವರಿ ಗಮನಿಸಲಾಗಿದೆ. ಒತ್ತುವರಿಯನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದ್ದೇನೆ. ಮಾನ್ಯತಾ ಟೆಕ್ಪಾರ್ಕ್ ಸಿಇಒ ಅವರು ಸ್ವಂತ ರಸ್ತೆಯಲ್ಲಿ 90 ದಿನಗಳಲ್ಲಿ ಚರಂಡಿ ನಿರ್ಮಿಸಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದರು.

ಸಾಯಿ ಲೇಔಟ್‌ಗೆ ಭೇಟಿ ನೀಡಿದ್ದು, ಅದು ರಾಜಕಾಲುವೆಗಿಂತ ತಗ್ಗು ಪ್ರದೇಶದಲ್ಲಿದೆ. ರೈಲ್ವೆ ಸೇತುವೆ ಬಳಿ ವೆಂಟ್ ಕಿರಿದಾಗಿದ್ದು, ಅದನ್ನು ಅಗಲಗೊಳಿಸಿದರೆ ಮಾತ್ರ ಸಮಸ್ಯೆಗೆ ಪರಿಹಾರ ಸಾಧ್ಯ. ಅನೇಕ ವರ್ಷದಿಂದ ಈ ಸಮಸ್ಯೆಯಿದೆ. ವೆಂಟ್‌ಗಳ ನಿರ್ಮಾಣ ಮತ್ತು ಅಗಲಗೊಳಿಸಲು ಈಗಾಗಲೇ ಅನುದಾನ ಒದಗಿಸಲಾಗಿದ್ದು, ಕಾಮಗಾರಿ ಆದಷ್ಟು ಬೇಗನೆ ಪೂರ್ಣಗೊಳಿಸಲು ಸೂಚನೆ ನೀಡಿದ್ದೇನೆ. ಬಿಬಿಎಂಪಿ ಇದಕ್ಕಾಗಿ ಒಟ್ಟು 13 ಕೋಟಿ ಬಿಡುಗಡೆಗೆ ಸೂಚನೆ ನೀಡಿದ್ದೇನೆ. ಈಗಾಗಲೇ 6 ಕೋಟಿ ವೆಚ್ಚದ ಕಾಮಗಾರಿ ಪೂರ್ಣಗೊಂಡಿದ್ದು, 3 ಕೋಟಿ ಪಾವತಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಇನ್ನು ಒತ್ತುವರಿ ಮಾಡಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ, ಮುಲಾಜಿಲ್ಲದೆ ತೆರವುಗೊಳಿಸಲು ಸ್ಪಷ್ಟ ಸೂಚನೆ ನೀಡಿದ್ದು, ಬೆಂಗಳೂರಿನಲ್ಲಿ ನೆರೆ ನೀರು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ರಾಜಕಾಲುವೆ ಅಭಿವೃದ್ದಿಯಂತಹ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಯೋಜನೆಗಳನ್ನು ರೂಪಿಸಿ ಕಾಮಗಾರಿಗಳನ್ನು ಕೈಗೊಂಡಿದೆ ಎಂದು ಹೇಳಿದರು.

Tags:
error: Content is protected !!