Mysore
25
haze

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ಕ್ರೀಡಾಪಟುಗಳಿಗೆ ಸದನದಲ್ಲೇ ಗುಡ್‌ನ್ಯೂಸ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.

ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಹಾಯಧನ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಅವರು, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ವಿದ್ಯಾರ್ಥಿಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನೇರವಾಗಿ ಸಹಾಯಧನ ನೀಡುವ ಯಾವುದೇ ಕಾರ್ಯಕ್ರಮವಿರುವುದಿಲ್ಲ.

ಆದರೆ ಕರ್ನಾಟಕ ಕ್ರೀಡಾ ಪ್ರಾಧಿಕಾರದಲ್ಲಿ ಮಾನ್ಯತೆ ಪಡೆದ ರಾಜ್ಯ ಕ್ರೀಡಾ ಸಂಸ್ಥೆಗಳು ರಾಷ್ಟ್ರಮಟ್ಟದಲ್ಲಿ ಕ್ರೀಡಾಕೂಟಗಳಿಗೆ ಕಳುಹಿಸುವ ವಿದ್ಯಾರ್ಥಿಗಳನ್ನು ಒಳಗೊಂಡಂತೆ ರಾಜ್ಯದ ಕ್ರೀಡಾಪಟುಗಳಿಗೆ ಸಹಾಯಧನ ಮೊತ್ತ ಹೆಚ್ಚಳ ಮಾಡಲಾಗುತ್ತದೆ.

ಕ್ರೀಡಾಪಟುಗಳಿಗೆ ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ 2ನೇ ದರ್ಜೆ ರೈಲು, ಬಸ್‌ ಪ್ರಯಾಣದ ದರದ ಪ್ರಯಾಣಭತ್ಯೆ, 200ರೂ ದಿನಭತ್ಯೆ, 1000ರೂಗಳ ಕ್ರೀಡಾಗಂಟು, ಸ್ಥಳೀಯ ಪ್ರಯಾಣ ಶುಲ್ಕ ರೂ 200 ನೀಡಲಾಗುತ್ತಿದ್ದು, ಪೂರ್ವಭಾವಿ ತರಬೇತಿ ಶಿಬಿರದಲ್ಲಿ ಭಾಗವಹಿಸಿದವರಿಗೂ 200ರೂ ಸಹಾಯಧನ ನೀಡಲಾಗುತ್ತಿದೆ.

ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಕರ್ನಾಟಕದ ಕ್ರೀಡಾಪಟುಗಳಿಗೆ ನಗದು ಬಹುಮಾನ ಗರಿಷ್ಠ 5000ರೂ ಮಿತಿಗೆ ಒಳಪಟ್ಟು ಶೈಕ್ಷಣಿಕ ಶುಲ್ಕ ಮರುಪಾವತಿ ರೂಪದಲ್ಲಿ ಪ್ರೋತ್ಸಾಹಧನ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಈ ಬಾರಿ ಕ್ರೀಡಾಪಟುಗಳ ಭತ್ಯೆ ಹಾಗೂ ಸಹಾಯಧನ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

 

Tags: