ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಆಯೋಜಿಸಿದ್ದ ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ವಿಷಯಾಧಾರಿತ ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಇದು 218ನೇ ವರ್ಷದ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನವಾಗಿದೆ. ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣರಿಗೆ ಗೌರವ ಸಲ್ಲಿಸುವ ಕೆಲಸ ಆಗಿದೆ ಎಂದು ಹೇಳಿದರು.
ಬ್ರಿಟೀಷರ ವಿರುದ್ಧ ಹೋರಾಡಿದ ಈ ವೀರರನ್ನು ಸ್ಮರಿಸಬೇಕು. ತೋಟಗಾರಿಕೆ ಇಲಾಖೆಯಿಂದ ಇಂದು ಸ್ವಾತಂತ್ರ್ಯ ವೀರರಿಗೆ ಗೌರವ ಸಲ್ಲಿಸಲಾಗಿದೆ. ದೇಶಕ್ಕಾಗಿ ಹೋರಾಡಿದವರನ್ನು ನಾವೆಲ್ಲರೂ ಸ್ಮರಿಸಬೇಕು ಎಂದರು.
ಬಳಿಕ ಸಿಎಂ ಸಿದ್ದರಾಮಯ್ಯ ಅವರು, ಫ್ಲವರ್ ಶೋ ವೀಕ್ಷಣೆ ಮಾಡಿದರು. ಈ ವೇಳೆ ಸಚಿವ ರಾಮಲಿಂಗಾರೆಡ್ಡಿ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ತೋಟಗಾರಿಗೆ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಶ್ರೀ ವಚನಾನಂದ ಸ್ವಾಮಿಗಳು, ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
ಇಂದಿನಿಂದ ಆಗಸ್ಟ್.18ರವರೆಗೆ ಲಾಲ್‌ಬಾಗ್‌ನಲ್ಲಿ ಫ್ಲವರ್ ಶೋ ನಡೆಯಲಿದ್ದು, ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ವಿಷಯಾಧಾರಿತ ಫುಷ್ಪಮೇಳ ನಡೆಯುತ್ತಿದೆ.





