ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸಮಾಜ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದುಗೆ, ಪ್ರಜಾಪ್ರಭುತ್ವ ದಿನದ ರಾಯಭಾರಿ ಹರೇಕಳ ಹಾಜಬ್ಬ, ಪೌರ ಕಾರ್ಮಿಕ ತಾಯಂದಿರಾದ ನಾಗಲಕ್ಷ್ಮೀ, ಮಂಜುಳ, ತೃತೀಯ ಲಿಂಗಿ ಮಂಜುಳ ಹಾಗೂ ವಿಶೇಷ ಚೇತನ ಮಕ್ಕಳು ಸಾಥ್ ನೀಡಿದರು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಉಳಿವಿಗೆ ನಾವೆಲ್ಲಾ ಹೇಗೆ ಶ್ರಮ ವಹಿಸಬೇಕು. ಪ್ರಜಾಪ್ರಭುತ್ವದ ದಿನದ ಅಂಗವಾಗಿ ನಾವೆಲ್ಲಾ ದೇಶ ಹಾಗೂ ರಾಜ್ಯದಲ್ಲಿ ಸಹೋದರರಂತೆ ಇರುವಂತೆ ಜನತೆಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪ ಸಭಾಪತಿ ರುದ್ರಪ್ಪ ಲಮಾಣಿ, ಸಚಿವರಾದ ಎಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್, ಮುಖ್ಯಮಂತ್ರಿ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮದ್, ಯು.ಬಿ.ವೆಂಕಟೇಶ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.