ಬೆಂಗಳೂರು: ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಸಂಬಂಧ ದೆಹಲಿಯ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿ, ಅವರ ಸುರಕ್ಷತೆಗೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಧ್ಯಪ್ರಾಚ್ಯ ದೇಶಗಳಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡಿರುವ ಕಾರಣ ನಾಡಿಗೆ ಮರಳಲು ಸಾಧ್ಯವಾಗದ ಯುದ್ಧಪೀಡಿತ ರಾಷ್ಟ್ರಗಳಲ್ಲಿ ಸಿಲುಕಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡುತ್ತೇನೆ.
ಸಹಾಯವಾಣಿಯನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯುದ್ಧಪೀಡಿತ ದೇಶಗಳಲ್ಲಿ ನೆಲೆಸಿರುವ ಕುಟುಂಬ ಸದಸ್ಯರು ಸಂಪರ್ಕಕ್ಕೆ ಸಿಗದೇ ಇದ್ದಲ್ಲಿ ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ. ಪ್ರತಿಯೊಬ್ಬ ಕನ್ನಡಿಗನ ಸುರಕ್ಷತೆ ನಮ್ಮ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ ಎಂದು ಹೇಳಿದರು.





