ಬೆಳಗಾವಿ: ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಪಕ್ಷದವರು ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ಹಿಂಪಡೆದು ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳಿಗೆ ಹಂಚಿಕೆ ಮಾಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಮತ್ತೊಂದು ಆರೋಪ ಮಾಡಿದ್ದಾರೆ.
ಸುವರ್ಣಸೌಧದಲ್ಲಿ ಇಂದು(ಡಿ.9) ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಬೇಡಿಕೆಯ ವಿಚಾರದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಅಫಿಡವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನದ ಮುಂದೆ ಮಂಡಿಸಲಾಗುವುದು. ಆದರೆ ನಮ್ಮ ಸರ್ಕಾರ ಈ ಸಮುದಾಯಕ್ಕೆ ಅನ್ಯಾಯ ಮಾಡಿಲ್ಲ ಎಂದು ಹೇಳಿದ್ದಾರೆ.
ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಹೀಗಿರುವಾಗ ನಾನೇಗೆ ಪಂಚಮಸಾಲಿಗಳನ್ನು 2ಎಗೆ ಸೇರಿಸಲು ಅಡ್ಡಿಯಾಗುತ್ತೇನೆ ಎಂದು ಪ್ರಶ್ನಿಸಿದ್ದಾರೆ.





