ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದು ಆಲಮಟ್ಟಿ ಅಣೆಕಟ್ಟಿಗೆ ಬಾಗಿನ ಅರ್ಪಿಸಿದ್ದಾರೆ.
ಇತ್ತೀಚೆಗೆ ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಸುರಿದ ಭಾರೀ ಮಳೆಯಿಂದ ಆಲಮಟ್ಟಿ ಅಣೆಕಟ್ಟು ಸಂಪೂರ್ಣ ಭರ್ತಿಯಾಗಿದ್ದು, ಸರ್ಕಾರದಿಂದ ಬಾಗಿನ ಅರ್ಪಿಸಲಾಗಿದೆ.
ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಲಮಟ್ಟಿ ಜಲಾಶಯಕ್ಕೆ ತೆರಳಿ ಬಾಗಿನ ಅರ್ಪಿಸಿದರು. ಈ ವೇಳೆ ಕೊಪ್ಪಳದ ಜಿಲ್ಲಾಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್‍ಖಾನ್, ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.
ಇದನ್ನು ಓದಿ:ಮುಡಾ ಪ್ರಕರಣ : ಸಿಎಂ ಕುಟುಂಬಕ್ಕೆ ಕ್ಲೀನ್ ಚಿಟ್
ಇನ್ನು ಆಲಮಟ್ಟಿ ಅಣೆಕಟ್ಟಿನ ಎತ್ತರ ಬಹು ಚರ್ಚಿತ ವಿಷಯವಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇತ್ತೀಚೆಗೆ ಅಚ್ಚುಕಟ್ಟು ಪ್ರದೇಶದ ಜನಪ್ರತಿನಿಧಿಗಳ ಸಭೆ ನಡೆಸಿ ಚರ್ಚಿಸಿದ್ದರು. ಆ ವೇಳೆ ಕೃಷ್ಣಾ ಮೂರನೇ ಹಂತದ ಯೋಜನೆ ಜಾರಿಗೊಳ್ಳಲು ಭೂ ಸ್ವಾಧೀನಕ್ಕೆ ಪ್ರತಿ ಎಕರೆಗೆ 50 ಲಕ್ಷ ರೂ. ಪರಿಹಾರವನ್ನು ಹೆಚ್ಚಿಸಬೇಕೆಂದು ಸಚಿವ ಆರ್.ಬಿ.ತಿಮ್ಮಾಪುರ್ ಮನವಿ ಮಾಡಿದರು. ಇದರಿಂದ ಅಸಮಾಧಾನಗೊಂಡ ಡಿ.ಕೆ.ಶಿವಕುಮಾರ್ ಸಭೆಯಲ್ಲೇ ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಆದರೆ ಇಂದು ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್, ಆರ್.ಬಿ.ತಿಮ್ಮಾಪುರ್ ಒಟ್ಟಿಗೆ ಕಾಣಿಸಿಕೊಂಡಿದ್ದು ವಿಶೇಷವೆನಿಸಿತು.





