ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು, ಇಂದು ಮುಂಜಾನೆ ವಿಧಿವಶರಾಗಿರುವ ಮಾಜಿ ಸಿಎಂ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಎಸ್.ಎಂ.ಕೃಷ್ಣ ಅವರಿಗೆ ಗೌರವ ಸೂಚಿಸಿ ಕಲಾಪ ಮುಗಿದ ನಂತರ ಬೆಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು, ಸದಾಶಿವನಗರದಲ್ಲಿರುವ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಜೊತೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಸಹ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಎಸ್.ಎಂ.ಕೃಷ್ಣ ಅವರ ರಾಜಕೀಯ ಬದುಕೇ ಒಂದು ಹೋರಾಟದ ರೀತಿ ಇದೆ. ರಾಜಕೀಯದಲ್ಲಿ 6 ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. ಅವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ವೇಳೆ ಕರ್ನಾಟಕ ರಾಜ್ಯ ಅಭಿವೃದ್ದಿ ಕಂಡಿದೆ.
ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡುವಲ್ಲಿ ಇವರ ಕೊಡುಗೆ ಅಪಾರವಾಗಿದೆ. ಇವರಿಗೆ ಮೈಸೂರು ಜಿಲ್ಲೆಯೆಂದರೆ ತುಂಬಾ ಇಷ್ಟ. ಏಕೆಂದರೆ ಇವರ ಯೌವ್ವನದ ಬಹಳಷ್ಟು ದಿನಗಳನ್ನು ಮೈಸೂರಿನಲ್ಲೇ ಕಳೆದಿದ್ದಾರೆ. ಇವರ ಆರಂಭಿಕ ವಿದ್ಯಾಭ್ಯಾಸವು ಇಲ್ಲಿಂದಲೇ ಶುರುವಾಯಿತು ಎಂದು ಕೃಷ್ಣ ಅವರ ಬಾಲ್ಯಜೀವನವನ್ನು ಮೆಲುಕು ಹಾಕಿದರು.
ಎಸ್.ಎಂ.ಕೃಷ್ಣ ಅವರು, ಸಿಎಂ ಆಗಿ, ವಿದೇಶಾಂಗ ಸಚಿವರಾಗಿ, ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ ಕುಮಾರ್ ಅಪಹರಣ, ಕಾವೇರಿ ವಿವಾದ ಅನೇಕ ಸಮಸ್ಯೆಗಳನ್ನು ಜಾಣ್ಮೆಯಿಂದ ನಿಭಾಯಿಸಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.