ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟ.ಕಾಗೇಪುರ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ಫುಡ್ ಪಾಯ್ಸನಿಂಗ್ ಆಗಿದ್ದು, ಈ ದುರ್ಘಟನೆಯಲ್ಲಿ ಮಡಿದ ಬಾಲಕ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೆ. ಹಾಗಾಗಿ ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿಸಿದ್ದಾರೆ.
ಈ ದುರ್ಘಟನೆಯಲ್ಲಿ ಮಡಿದ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಬೇರೆಡೆ ತಯಾರಿಸಿದ ಆಹಾರವನ್ನು ಸೇವಿಸುವ ಮುನ್ನ ಅದರಲ್ಲಿಯೂ ಚಿಕ್ಕ ವಿದ್ಯಾರ್ಥಿಗಳಿಗೆ ನೀಡುವ ಮುನ್ನ ಹೆಚ್ಚು ಜಾಗೃತೆ ವಹಿಸಿ. ಅಜಾಗರೂಕತೆಗೆ ಅಮೂಲ್ಯ ಜೀವಗಳು ಬಲಿಯಾಗದಿರಲಿ ಎಂದು ಹೇಳಿದ್ದಾರೆ.





