ಬೆಂಗಳೂರು: ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವಾದಿಸಿ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಇಂದು(23) ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್ ಅಹ್ಮದ್ ಖಾನ್ ಪಠಾಣ್, ಅನ್ನಪೂರ್ಣ ತುಕಾರಾಮ್ ಹಾಗೂ ಸಿ.ಪಿ. ಯೋಗೇಶ್ವರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದಿದ್ದಾರೆ.
ಚುನಾವಣೆಯ ವೇಳೆ ಸರ್ಕಾರದ ವಿರುದ್ಧ ವಿಪಕ್ಷಗಳು ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮಾಡಿದ್ದರು ಸಹ ಅವುಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ ಎಂದು ಹೇಳಿದ್ದಾರೆ.
ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.