Mysore
28
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ವೈದ್ಯರು ಹೆಚ್ಚು ಸಮಾಜ ಮುಖಿಯಾಗಿ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜ ಮುಖಿಯಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸೋಮವಾರ (ಜುಲೈ.1) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ‘ರಾಷ್ಟ್ರೀಯ ವೈದ್ಯರ ದಿನಾಚರಣೆ’ಯನ್ನು ಉದ್ಘಾಟಿಸಿ ಮಾತನಾಡಿದರು.

ವೈದ್ಯರು ತಮ್ಮ ವೃತ್ತಿ ಧರ್ಮವನ್ನು ಪಾಲಿಸುವುದು ಅತ್ಯಂತ ಅವಶ್ಯಕ. ರೋಗಿಯ ಪ್ರಾಣ ಉಳಿಸಿದರೆ ವೈದ್ಯರೇ ದೇವರಾಗುತ್ತಾರೆ. ತಮ್ಮ ವೃತ್ತಿಯಲ್ಲಿ ಯಾವುದೇ ಕಾರಣಕ್ಕೂ ವೈದ್ಯರು ನಿರ್ಲಕ್ಷ್ಯ ತೋರಬಾರದು. ರೋಗಗಳನ್ನು ತಡೆಗಟ್ಟುವುದನ್ನು ಕೂಡ ಆರೋಗ್ಯ ಇಲಾಖೆ ಗಮನದಲ್ಲಿರಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವವರು ಹಾಗೂ ಆರೋಗ್ಯ ರಕ್ಷಣೆ ಮಾಡುವವರು ವೈದ್ಯರು. ಕರೋನಾ ಸಂದರ್ಭದಲ್ಲಿ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡುವ ಸೇವೆಯನ್ನು ಮರೆಯಲಿ ಸಾಧ್ಯವಿಲ್ಲ. ತಮ್ಮ ಜೀವದ ಹಂಗನ್ನು ತೊರೆದು ವೈದ್ಯರು ದುಡಿದಿದ್ದಾರೆ ಎಂದರು.

ಸಮಾಜದ ಆರೋಗ್ಯ ಕಾಪಾಡಲು ಸರ್ಕಾರವೂ ಪ್ರಯತ್ನ ಪಡುತ್ತಿದೆ. ಅನೇಕ ಕಾರ್ಯಕ್ರಮಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿ ಮಾಡುತ್ತಿವೆ ಎಂದರು.

ಸಿಡುಬು, ಪ್ಲೇಗು, ಪೋಲಿಯೋ ಮುಂತಾದ ಕಾಯಿಲೆಗಳು ನಿರ್ಮೂಲನೆಯಾಗಿದ್ದು, ಕೆಲವು ನಿಯಂತ್ರಣಕ್ಕೆ ಬಂದಿವೆ. ಇವನ್ನೂ ನಿರ್ಮೂಲನೆ ಮಾಡಲು ಸಾಧ್ಯವಿದೆ. ವಿಜ್ಞಾನ ತಂತ್ರಜ್ಞಾನ ಬೆಳೆದಂತೆಲ್ಲಾ ಕಾಯಿಲೆಗಳ ನಿರ್ಮೂಲನೆ ಹೆಚ್ಚು ಸಾಧ್ಯವಾಗುತ್ತಿದೆ ಎಂದರು.

ಇನ್ನು ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗುತ್ತಿದ್ದು, ಇದರ ಮೂಲೋಚ್ಚಾಟನೆ ಮಾಡಬೇಕು. ಈ ಬಗ್ಗೆ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಬಗ್ಗೆ ಸಾರ್ವಜನಿಕರೂ ಸಹ ಸರ್ಕಾರದೊಂದಿಗೆ ಕೈಜೋಡಿಸಬೇಕು. ಆಗ ಮಾತ್ರ ಇದರ ನಿವಾರಣೆ ಸಾಧ್ಯ ಎಂದರು.

ಸಿಗರೇಟ್ ಆರೋಗ್ಯಕ್ಕೆ ಮಾರಕ ಎಂದರೂ ಕೂಡ ಸಿಗರೇಟ್ ಸೇದುತ್ತಾರೆ. ಜನರು ಕೂಡ ಜಾಗೃತರಾಗಬೇಕು. ದುಶ್ಚಟಗಳಿಂದ ದೂರವಿರಬೇಕು ಎಂದು ಕಿವಿಮಾತು ಹೇಳಿದರು. ಹಿಂದೆ ತಮಗೂ ಸಿಗರೇಟ್ ಸೇದುವ ಅಭ್ಯಾಸವಿತ್ತು. ಅದರಿಂದಾಗಿ ಆಂಜಿಯೋಪ್ಲಾಸ್ಟಿ ಒಳಗಾಗಿದ್ದನ್ನು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸ್ಮರಿಸಿದರು.

ಇದರ ಜತೆಗೆ ವೈದ್ಯರ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು. ಜೀವನ ಸಾಧನೆ ಹಾಗೂ ಇತರೆ ಪ್ರಶಸ್ತಿಗಳಿಗೆ ಭಾಜನರಾದ ವೈದ್ಯರನ್ನು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸನ್ಮಾನಿಸಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ ರೇವಣ್ಣ, ಶಾಸಕ ಡಾ. ಎಂ.ಟಿ.ಶ್ರೀನಿವಾಸ್, ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ವೈದ್ಯರ ಸಂಘದ ಅಧ್ಯಕ್ಷರು ಡಾ.ವಿವೇಕ್ ದೊರೆ ಮೊದಲಾದವರು ಉಪಸ್ಥಿತರಿದ್ದರು.

Tags: