Mysore
24
few clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಪ್ರಿಯಾಂಕ್‌ ಖರ್ಗೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಅಗತ್ಯವಿಲ್ಲ, ನೀಡಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು(ಜನವರಿ.1) ಪ್ರಿಯಾಂಕ್‌ ಖರ್ಗೆ ಅವರ ರಾಜೀನಾಮೆಗೆ ಬಿಜೆಪಿ ನಾಯಕರು ಆಗ್ರಹಿಸುತ್ತಿರುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆಯವರು ರಾಜೀನಾಮೆ ನೀಡಬೇಕೆಂಬ ಪ್ರತಿಪಕ್ಷಗಳ ಒತ್ತಾಯ ರಾಜಕೀಯ ಪ್ರೇರಿತವಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್‌ನ ಗುತ್ತಿಗೆದಾರನ ಡೆತ್ ನೋಟ್‌ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಹೆಸರಿಲ್ಲ. ಹೀಗಾಗಿ ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ, ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜೀನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಆದಾಗ್ಯೂ ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ. ಪ್ರಕರಣದ ಸಂಬಂಧ ದಾಖಲಾಗಿರುವ ದೂರಿನ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಬಿಜೆಪಿಯವರು ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದರೆ ರಾಜ್ಯ ಪೊಲೀಸ್‌ ಇಲಾಖೆ ಹಾಗೂ ಪೊಲೀಸರ ಬಗ್ಗೆ ಬಿಜೆಪಿಯವರಿಗೆ ನಂಬಿಕೆಯಿಲ್ಲವೇ? ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಒಂದೇ ಒಂದು ಪ್ರಕರಣವನ್ನೂ ಸಿಬಿಐಗೆ ವಹಿಸಿರಲಿಲ್ಲ. ಆದ್ದರಿಂದ ಸಿಬಿಐಗೆ ತನಿಖೆ ವಹಿಸಬೇಕೆಂಬ ಬೇಡಿಕೆ ಮುಂದಿರಿಸಲು ಬಿಜೆಪಿಯವರಿಗೆ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದೇ ವೇಳೆ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಎಂಎಲ್‌ಸಿ ಸಿ.ಟಿ ರವಿಯವರ ಪ್ರಕರಣವನ್ನೂ ಸಿಐಡಿಗೆ ವಹಿಸಲಾಗಿದೆ. ಅವಾಚ್ಯ ಪದಬಳಕೆ ಆಗಿದೆಯಾ? ಇಲ್ಲವಾ? ಎಂಬ ಬಗ್ಗೆ ಎಫ್ಎಸ್ಎಲ್ ವರದಿ ಬರಲಿದೆ. ಮಹಿಳಾ ಸಚಿವರಿಗೆ ಅವಹೇಳನ ಮಾಡಿರುವ ಆರೋಪವಿದ್ದು, ಸಿ.ಟಿ.ರವಿಯವರ ಮೇಲೆ ದೂರು ದಾಖಲಾಗಿದೆ. ಹಾಗಾಗಿ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

Tags:
error: Content is protected !!