Mysore
19
overcast clouds
Light
Dark

ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿ ಉದ್ಘಾಟನೆ ಮಾಡಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷೆ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಗೌರಿ ಹಬ್ಬದಂದು ಚಾಲನೆ ನೀಡಲಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆ ಯಾವಾಗ ಪ್ರಾರಂಭವಾಗುತ್ತದೆ ಎಂದು ಕಾದು ಕುಳಿತಿವೆ.

ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಕೂಡ ಇದಕ್ಕೆ ಸಂಪೂರ್ಣ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಈಗಾಗಲೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಮಾಡಿದ್ದೇನೆ ಎಂದರು.

ಈ ಯೋಜನೆ ಮೂಲಕ ನೀರನ್ನು ಕಾಲುವೆಗಳಿಗೆ ಹರಿಸುತ್ತಿದ್ದೇವೆ. ಈ ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗಗಳಲ್ಲಿ ಸ್ವಲ್ಪ ಸಮಸ್ಯೆ ಇದೆ. ಆ ಎಲ್ಲಾ ಸಮಸ್ಯೆಗಳನ್ನು ಸಹ ನಾವು ಬಗೆಹರಿಸಿದ್ದೇವೆ. ಜಾಗ ಹಸ್ತಾಂತರವಾದ ಬಳಿಕ ಪ್ರಮುಖ ಕಾಲುವೆಗಳಿಗೆ ನೀರು ಹರಿಯಲಿದೆ ಎಂದು ಮಾಹಿತಿ ನೀಡಿದರು.

ಗೌರಿ ಹಬ್ಬದಂದು ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಪಕ್ಷಭೇದ ಮರೆತು ಎಲ್ಲಾ ನಾಯಕರು ಹಾಗೂ ರೈತರಿಗೆ ಆಹ್ವಾನಿಸಿದ್ದೇವೆ. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೂ ಆಹ್ವಾನ ನೀಡುವಂತೆ ತಿಳಿಸಿದ್ದೇನೆ. ಈ ಪವಿತ್ರ ಕಾರ್ಯಕ್ಕೆ ಎಲ್ಲರೂ ಸಾಕ್ಷಿಯಾಗಬೇಕು ಎಂದು ಮನವಿ ಮಾಡಿದರು.