ಬೆಂಗಳೂರು : ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ(Carrying Capacity)ದ ಅಧ್ಯಯನಕ್ಕೆ ಅರಣ್ಯ ಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಸಮಿತಿ ರಚಿಸಿ, 6 ತಿಂಗಳಲ್ಲಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಕರ್ನಾಟಕ ಜೀವವೈವಿಧ್ಯ ಮಂಡಳಿ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಭೂಕುಸಿತ ಸಂಭವಿಸುತ್ತಿದ್ದು, ಜೀವಹಾನಿ ಆಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು.
ಈ ನಿಟ್ಟಿನಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ನೇತೃತ್ವದಲ್ಲಿ, ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಹಾಗೂ ತಜ್ಞರನ್ನೊಳಗೊಂಡ ಸಮಿತಿಯನ್ನು 10 ದಿನಗಳ ಒಳಗಾಗಿ ರಚಿಸಿ, 6 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದರು.
368 ವೃಕ್ಷ ರಕ್ಷಣೆಗೆ ಕ್ರಮ ;
ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ಕಾಲೋನಿಯಲ್ಲಿರುವ ಜೀವವೈವಿಧ್ಯ ತಾಣದ 368 ವಿವಿಧ ಪ್ರಭೇದದ ಬೃಹತ್ ಮರಗಳಿದ್ದು, ಇವುಗಳನ್ನು ಸಂರಕ್ಷಿಸಲು ಈ ಪ್ರದೇಶವನ್ನು ಜೀವವೈವಿಧ್ಯ ಪಾರಂಪರಿಕ ತಾಣವಾಗಿ ಘೋಷಿಸುವಂತೆ ಸ್ಥಳೀಯರು ಮತ್ತು ಪರಿಸರ ಪ್ರೇಮಿಗಳು ಮನವಿ ಸಲ್ಲಿಸಿದ್ದು, ಈ ಸಂಬಂಧ ಪ್ರಕ್ರಿಯೆ ಆರಂಭಿಸುವಂತೆ ಮತ್ತು ಅಲ್ಲಿಯವರೆಗೆ ಮರ ಕಡಿಯಲು ಅನುಮತಿ ನೀಡದಂತೆ ಅರಣ್ಯ ಸಚಿವರು ಸೂಚಿಸಿದರು.
ಸಭೆಯಲ್ಲಿ ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ವಿಜಯ ಮೋಹನ ರಾಜ್, ಎಪಿಸಿಸಿಎಫ್ ಕುಮಾರ್ ಪುಶ್ಕರ್, ಭಾರತೀಯ ವಿಜ್ಞಾನ ಮಂದಿರದ ವಿಜ್ಞಾನಿ ಟಿ. ರಾಮಚಂದ್ರ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.





