ಬೆಂಗಳೂರು : ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರು ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಅವಹೇಳನ ಮಾಡಿದ್ದು, ಇದು ಕಾಂಗ್ರೆಸ್ ಪಕ್ಷವು ಸಂವಿಧಾನವನ್ನು ಗೌರವಿಸದ ಪಕ್ಷ ಎಂಬುದನ್ನು ಸಾಬೀತುಪಡಿಸಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಗೀತಾ ವಿವೇಕಾನಂದ ಅವರು ತಿಳಿಸಿದ್ದಾರೆ.
ಅಧೀರ್ ರಂಜನ್ ಚೌಧರಿ ಅವರು ರಾಷ್ಟ್ರಪತಿಗಳನ್ನು ‘ರಾಷ್ಟ್ರಪತ್ನಿ’ ಎಂದು ಸಂಬೋಧಿಸಿದ್ದಾರೆ.
ಈ ಹೇಳಿಕೆಯನ್ನು ಖಂಡಿಸುವುದಾಗಿ ಅವರು ತಿಳಿಸಿದ್ದಾರೆ. ಈ ಹೇಳಿಕೆಯು ಕಾಂಗ್ರೆಸ್ ಪಕ್ಷವು ಬುಡಕಟ್ಟು ಸಮುದಾಯದ ವಿರೋಧಿ, ದಲಿತ ಮತ್ತು ಮಹಿಳಾ ವಿರೋಧಿ ಎಂಬುದಕ್ಕೆ ಸ್ಪಷ್ಟ ಉದಾಹರಣೆ ಎಂದು ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿ ಇದ್ದಾಗ ಕೂಡ ದಲಿತರು ಮತ್ತು ಆದಿವಾಸಿ ಸಮುದಾಯವನ್ನು ಕಡೆಗಣಿಸಿ ಕೇವಲ ಮತಬ್ಯಾಂಕ್ ಆಗಿ ನೋಡುತ್ತಿತ್ತು. ಸಂವಿಧಾನಕ್ಕೆ ಮತ್ತು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಗೌರವ ತೋರಿತ್ತು ಎಂದು ಗೀತಾ ವಿವೇಕಾನಂದ ಅವರು ವಿವರಿಸಿದ್ದಾರೆ.
ಬಿಜೆಪಿ ಸರ್ಕಾರಗಳು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಮುಖ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಿದೆ. ಅಲ್ಲದೆ, ರಾಜ್ಯದಲ್ಲೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭೇಟಿ ಕೊಟ್ಟಿದ್ದ ಸ್ಥಳಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿದೆ. ಪರಿಶಿಷ್ಟ ಜಾತಿ, ಪಂಗಡದವರ ಸಮಗ್ರ ಅಭಿವೃದ್ಧಿಗೆ ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ, ಕಾಂಗ್ರೆಸ್ ಪಕ್ಷದವರು ಮತಬ್ಯಾಂಕ್ ದೃಷ್ಟಿಯಿಂದ ದಲಿತರ ಬಗ್ಗೆ ಮೊಸಳೆಕಣ್ಣೀರು ಸುರಿಸುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.