Mysore
19
overcast clouds
Light
Dark

ಹಿಂದೂ ಕಾರ್ಯಕರ್ತರನ್ನು ಬೆದರಿಸುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ: ಬಿವೈ ವಿಜಯೇಂದ್ರ

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸಚಿವರು, ಶಾಸಕರು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಆಡಳಿತಾರೂಢ ಕಾಂಗ್ರೆಸ್‌ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಆಡಳಿತ ಪಕ್ಷದಿಂದ ಅಶಾಂತಿ ಉಂಟಾಗಿದೆ. ಬಿ.ಕೆ ಹರಿಪ್ರಸಾದ್‌ ಅವರನ್ನು ಬಂಧಿಸಿ ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಸಿಎಂ ಸಿದ್ದರಾಮಯ್ಯ ಅವರು ಈ ನಿರ್ಧಾರವನ್ನು ತಕ್ಷಣವೇ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಡಿ.ಜೆ. ಹಳ್ಳಿ, ಕೆ.ಜೆ.ಹಳ್ಳಿ ಗಲಭೆ ಕೇಸ್​ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದೂ ಕಾರ್ಯಕರ್ತರನ್ನು ಬೆದರಿಸುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ. ಮತ್ತೊಂದು ಕಡೆ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಹಿಂದೂ ಕಾರ್ಯಕತ್ರರನ್ನು ಬಂಧಿಸುತ್ತಾರೆ. ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚಿದವರನ್ನು ಅಮಾಯಕರು ಎನ್ನುವ ರಾಜ್ಯ ಸರ್ಕಾರ ಈ ವರ್ತನೆ ತೋರುತ್ತಿರುವುದು ಖಂಡನೀಯವಾಗಿದೆ ಎಂದು ಬಿವೈ ವಿಜಯೇಂದ್ರ ಮೈಸೂರಿನಲ್ಲಿ ಕಿಡಿಕಾರಿದ್ದಾರೆ.

ಧಾರವಾಡದಲ್ಲಿ ಪ್ರಲ್ಹಾದ್‌ ಜೋಶಿ ಹೇಳಿದ್ದೇನು?
ಕೆಜೆ ಹಳ್ಳಿ, ಡಿಜೆ ಹಳ್ಳಿ ಆರೋಪಿಗಳ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್​ ಹೇಳಿಕೆಗೆ, ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣದ ಆರೋಪಿಗಳು ಅಮಾಯಕರು ಎಂಬ ಡಿಕೆ ಶಿವಕುಮಾರ್‌ ಅವರ ಹೇಳಿಕೆಗೆ ಇದು ತುಷ್ಟೀಕರಣ ರಾಜಕಾರಣವಾಗಿದೆ. ಕರಸೇವಕರನ್ನು ಬಂಧಿಸುತ್ತಿದ್ದಾರೆ ಎಂದರೆ ಕಾಂಗ್ರೆಸ್‌ನ ದುಸ್ಥಿತಿ ನೋಡಿ, ಇದು ಕೇವಲ ತುಷ್ಟೀಕರಣದ ಪರಾಕಾಷ್ಟೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಹೋರಾಟದ ಫಲದಿಂದ ಜನರು ಈಗಾಗಲೇ ಉತ್ತರ ನೀಡಿದ್ದಾರೆ. ಹೋರಾಟದ ಫಲದಿಂದ ಕರಸೇವಕರು ಹೊರ ಬಂದಿದ್ದಾರೆ. ವಿನಾ ಕಾರಣ ಬಂಧಿಸುವ ಅಧಿಕಾರಿಗಳಿಗೆ ಹೋರಾಟದ ಮೂಲಕ ಸ್ಪಷ್ಟ ಎಚ್ಚರಿಕೆ ನೀಡದ ಮೇಲೆ ಬಂಧಿಸುವುದನ್ನು ನಿಲ್ಲಿಸಿದ್ದಾರೆ ಎಂದು ಹೇಳಿದರು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ