ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕ ಬಿ.ಆರ್.ಪಾಟೀಲ್ ಭ್ರಷ್ಟಾಚಾರದ ಆರೋಪ ಮಾಡಿದ್ದು, ವಿಪಕ್ಷಗಳಿಗೆ ಮತ್ತೊಂದು ಅಸ್ತ್ರ ಸಿಕ್ಕಿದೆ.
ಕಲಬುರ್ಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಅವರು ಸಚಿವ ಜಮೀರ್ ಅಹಮ್ಮದ್ ಆಪ್ತ ಕಾರ್ಯದರ್ಶಿಗೆ ಕರೆ ಮಾಡಿ ಮಾತನಾಡಿದ್ದಾರೆ ಎನ್ನಲಾಗಿದೆ. ಈ ಆಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಹಣ ನೀಡಿದವರಿಗಷ್ಟೇ ವಸತಿ ಮನೆಗಳನ್ನು ಮಾಡುತ್ತಿದ್ದೀರಿ ಎಂದು ಗಂಭೀರ ಆರೋಪ ಮಾಡಿದ್ದಾರೆ.
ನನ್ನ ಕ್ಷೇತ್ರದಲ್ಲಿ ಹಣ ಪಡೆದು ವಸತಿ ಹಂಚಲಾಗಿದೆ. ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಶಾಸಕ ಬಿ.ಆರ್.ಪಾಟೀಲ್ (B R Patil) ಆರೋಪಿಸಿದ್ದಾರೆ.
ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಸ್ವಪಕ್ಷದ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದು, ಬಿಜೆಪಿ ಈಗ ಮತ್ತೊಂದಯ ದೊಡ್ಡ ಅಸ್ತ್ರ ಸಿಕ್ಕಿದಂತಾಗಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿದ್ದು, ಕಾಂಗ್ರೆಸ್ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರಗಳಲ್ಲಿ ಒಂದು. ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್.1 ಆಗಿದೆ. ಸ್ವಪಕ್ಷದ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡುತ್ತಿರುವಾಗ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರಿಗೆ ತಮ್ಮ ಸ್ಥಾನದಲ್ಲಿ ಮುಂದುವರಿಯುವ ಯಾವ ನೈತಿಕತೆ ಉಳಿದಿದೆ? ಸಚಿವ ಜಮೀರ್ ಅಹಮ್ಮದ್ ಖಾನ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.





