ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತೊಮ್ಮೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೊರೊನಾದ ಸೌಮ್ಯ ಲಕ್ಷಣಗಳು ಇರುವುದಾಗಿ ಸ್ವತಃ ಮುಖ್ಯಮಂತ್ರಿಗಳು ಟ್ವೀಟ್ ಮೂಲಕ ಬಹಿರಂಗ ಪಡಿಸಿದ್ದಾರೆ. ಕೋವಿಡ್ ದೃಢಪಟ್ಟಿರುವ ಕಾರಣ ಮುಖ್ಯಮಂತ್ರಿಯ ದಿಲ್ಲಿ ಪ್ರವಾಸ ರದ್ದಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತ್ಯೇಕವಾಗಿ ಇದ್ದಾರೆ. ನನಗೆ ಶನಿವಾರ ಕೋವಿಡ್-೧೯ ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದಿಲ್ಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಬೊಮ್ಮಾಯಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿಗಳು ದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಅಧಿಕೃತ ಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು.
ಮುಖ್ಯಮಂತ್ರಿಗಳು ಶುಕ್ರವಾರ ಬೆಂಗಳೂರಿನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಬೆಳಗ್ಗೆ ಚಿತ್ರಕಲಾ ಪರಿಷತ್‌ನಲ್ಲಿ ಕೈಮಗ್ಗ ಮೇಳ ಕಾರ್ಯಕ್ರಮ, ಮಧ್ಯಾಹ್ನ ಲಾಲ್‌ಬಾಗ್‌ನ ಫಲ-ಪುಷ್ಪ ಪ್ರದರ್ಶನದಲ್ಲಿ ಭಾಗಿಯಾಗಿದ್ದರು, ಸಂಜೆಯವರೆಗೂ ಕೃಷ್ಣಾದಲ್ಲಿ ಹಲವು ಸಭೆ ನಡೆಸಿದ್ದರು. ಮೊನ್ನೆಯಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಭೇಟಿ ನೀಡಿ ಹೋಗಿದ್ದರು. ಆ ವೇಳೆ ಅಮಿತ್ ಶಾ ಮತ್ತು ಸಿಎಂ ಬೊಮ್ಮಾಯಿಯವರು ಹಲವು ಕಾರ್ಯಕ್ರಮಗಳಲ್ಲಿ ವೇದಿಕೆ ಹಂಚಿಕೊಂಡಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದಿಲ್ಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವದ ರಾಷ್ಟ್ರೀಯ ಸಮಿತಿಯ ಮೂರನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಅದರಲ್ಲಿ ಸಿಎಂ ಬೊಮ್ಮಾಯಿ ಭಾಗಿಯಾಗಬೇಕಿತ್ತು.
ಕಳೆದ ಜನವರಿ ತಿಂಗಳಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಮೊದಲ ಬಾರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದೀಗ ೨ನೇ ಬಾರಿಗೆ ಸೋಂಕಿಗೆ ತುತ್ತಾಗಿದ್ದಾರೆ.