Mysore
26
overcast clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ದಿನೇಶ್‌ ಗುಂಡೂರಾವ್‌ ಆಕ್ರೋಶ

ಬೆಂಗಳೂರು: ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ ನೀಡಿದ್ದು, ಇದೊಂದು ಮಾನವೀಯತೆ ಮೀರಿದ ಕ್ರೌರ್ಯದ ಪರಮಾವಧಿ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳ ಕೃತ್ಯ ಆಘಾತ ಹಾಗೂ ನೋವು ತರಿಸಿದೆ. ಮೂಕ ಜೀವಿಗಳ ಮೇಲೆ ನಡೆದಿರುವ ಈ ಕ್ರೌರ್ಯ ಖಂಡನೀಯ. ಮಾನವೀಯತೆ ಇರುವ ಯಾರೂ ಈ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ಇದೊಂದು ಮಾನವೀಯತೆ ಮೀರಿದ ಕ್ರೌರ್ಯದ ಪರಮಾವಧಿ. ಈ ಕೃತ್ಯವೆಸಗಿದ ಪಾಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು. ಪಾಪಿಗಳ ಇಂತಹ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಈ ದುಷ್ಕೃತ್ಯವೆಸಗಿದ ಕಿರಾತಕರ ವಿರುದ್ಧ ಕಾನೂನಿನ ಚೌಕಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಸ್ತೆ ಬದಿ ಮಲಗಿದ್ದ ಹಸುಗಳ ಪೈಕಿ ಮೂರು ಹಸುಗಳ ಕೆಚ್ಚಲನ್ನು ಕಿಡಿಗೇಡಿಗಳು ಕೊಯ್ದು ವಿಕೃತಿ ಮೆರೆದಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಗಂಭೀರ ಗಾಯಗೊಂಡ ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹಸುಗಳು ಚೇತರಿಸಿಕೊಳ್ಳುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯ ಕೇಳಿಬರುತ್ತಿದೆ.

Tags: