ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ ಜಿ.ಪರಮೇಶ್ವರ ಅವರು ತಿಳಿಸಿದರು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಸುವ ಕುರಿತಂತೆ ವಿಧಾನಸೌಧದ ಉಪಸಮಿತಿ ಕೊಠಡಿಯಲ್ಲಿ ಸೋಮವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ)ಯ ಪದಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಅವರು, ಡಿಸೆಂಬರ್ ೨೪ರಂದು ವಿಜಯ್ ಹಜಾರೆ ಕ್ರಿಕೆಟ್ ಪಂದ್ಯ ನಡೆಸಲು ಅನುಮತಿ ನೀಡುವಂತೆ ಕೆಎಸ್‌ಸಿಎ ಮನವಿ ಮಾಡಿದೆ. ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡುವುದಿಲ್ಲ. ಪಂದ್ಯ ಮಾತ್ರ ನಡೆಸುತ್ತೇವೆ ಎಂದು ಕೆಎಸ್‌ಸಿಎ ಅವರು ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರೇಕ್ಷಕರ, ಕ್ರೀಡಾಪಟುಗಳ ಸುರಕ್ಷತೆಯೆ ಹಿತಾದೃಷ್ಟಿಯಿಂದ ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಲೋಕೋಪಯೋಗಿ, ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆ, ಆರೋಗ್ಯ ಇಲಾಖೆಯನ್ನೊಳಗೊಂಡ ಸಮಿತಿಯು ಮಧ್ಯಾಹ್ನ ೩ ಗಂಟೆಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿ, ಪರಿಶೀಲಿಸಿ ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಸಮಿತಿ ನೀಡುವ ವರದಿ ಆಧರಿಸಿ, ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.
ಇದನ್ನೂ ಓದಿ:-5 ಹುಲಿಗಳ ದರ್ಶನ : ಸೆರೆಗೆ ಆನೆಗಳ ನೆರವು ; ಗ್ರಾಮದಲ್ಲಿ ನಿಷೇಧಾಜ್ಞೆ
ಆರ್‌ಸಿಬಿ ಐಪಿಎಲ್ ಕಪ್ ಗೆದ್ದ ಸಂದರ್ಭದಲ್ಲಿ ವಿಜಯೋತ್ಸವ ಆಚರಿಸುವಾಗ ಜೂನ್ ೪ರಂದು ಬೆಂಗಳೂರಿನಲ್ಲಿ ಕಾಲ್ತುಳಿತವಾಗಿ ಹಲವರ ಜೀವ ಹಾನಿಯಾಗಿತ್ತು. ಅದರ ನಂತರ ಐಪಿಎಲ್ ಪಂದ್ಯಾವಳಿಗಳನ್ನು ಬೆಂಗಳೂರಿನಲ್ಲಿ ನಡೆಸಲು ಅನುಮತಿ ನಿರಾಕರಿಸಲಾಗಿತ್ತು. ಇದೇ ೨೪ ರಿಂದ ವಿಜಯ್ ಹಜಾರೆ ಟ್ರೊಫಿ ಪಂದ್ಯಾವಳಿಗಳು ನಡೆಯಲಿದೆ.. ಆ ಆಟದ ಪಂದ್ಯಗಳನ್ನು ಪ್ರೆ?ಕ್ಷಕರ ರಹಿತವಾಗಿ ಬೆಂಗಳೂರಿನಲ್ಲೂ ನಡೆಸಲು ಅನುಮತಿ ನೀಡುವಂತೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಮನವಿ ಮಾಡಿದೆ.





