ಬೆಳಗಾವಿ : ಮುಂಬರುವ ಆರ್ಥಿಕ ವರ್ಷದಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಿಸುವ ಯೋಜನೆಯನ್ನು ಆರಂಭಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಶಾಸಕ ಪ್ರದೀಪ್ ಈಶ್ವರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, ಹಿಂದೆ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರ ಸೈಕಲ್ ವಿತರಣೆಯನ್ನು ಸ್ಥಗಿತಗೊಳಿಸಿದೆ. ನಮ್ಮ ಸರ್ಕಾರ ಮತ್ತೆ ಆರಂಭಿಸುವ ಪ್ರಯತ್ನ ಮಾಡುತ್ತಿದೆ ಎಂದರು.
ತಾವು ಭೇಟಿ ನೀಡಿದ ಹಲವು ಶಾಲೆಗಳಲ್ಲಿ ಈ ರೀತಿಯ ಬೇಡಿಕೆಗಳು ಕೇಳಿಬಂದಿವೆ. ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಯಿಂದ ಅನುಕೂಲವಾಗಲಿದೆ. ಅದರಲ್ಲೂ ಗ್ರಾಮೀಣ ಭಾಗ ಮತ್ತು ಕಡಿಮೆ ಅಂತರದ ಶಾಲಾ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಹಾಯವಾಗಲಿದೆ ಎಂದು ತಿಳಿಸಿದರು.
ಶಾಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರ ಬಸ್ ಸೌಲಭ್ಯ ಒದಗಿಸಲಾಗುತ್ತಿದೆ. ಉಚಿತ ಬಸ್ ಪಾಸ್‍ಗಳಿವೆ. ಮುಂದುವರೆದು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೇಂದ್ರ ಪ್ರಾಯೋಜಿತ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಲ್ಲಿ ತಮ್ಮ ವ್ಯಾಪ್ತಿಯನ್ನೂ ಮೀರಿದ ಶಾಲೆಗಳಿಗೆ ಪ್ರಯಾಣಿಸಲು ಪ್ರತಿ ತಿಂಗಳಿಗೆ 600 ರೂ. ಸಾರಿಗೆ ಭತ್ಯೆ ನೀಡಲಾಗುತ್ತಿದೆ.
ವಿದ್ಯಾರ್ಥಿಗಳಿಗೆ ಮತ್ತಷ್ಟು ಅನುಕೂಲವಾಗುವ ಉದ್ದೇಶದಿಂದ ಮುಂದಿನ ಬಜೆಟ್‍ನಲ್ಲಿ ಚರ್ಚೆ ಮಾಡಿ ಯೋಜನೆಯನ್ನು ಮರು ಆರಂಭಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.





