ಹುಬ್ಬಳ್ಳಿ: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ. ಅವರಿಗೆ ಮಾಡಲು ಬೇರೇನು ಕೆಲಸವಿಲ್ಲ ಹೀಗಾಗಿ ಅವರು ಈ ರೀತಿಯಾಗಿ ಮಾಡುತ್ತಿದ್ದಾರೆ ಎಂದು ಸಚಿವ ಡಿ. ಸುಧಾಕರ್ ಅವರು ಟಾಂಗ್ ನೀಡಿದ್ದಾರೆ.
ಮೈಸೂರಿನ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ಯಾವುದೇ ಉರುಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಸಿಎಂ ಅವರು ತಮ್ಮ ರಾಜಕೀಯ ಇತಿಹಾಸದಲ್ಲಿ ಕಳಂಕ ರಹಿತವಾಗಿ ಆಡಳಿತ ಮಾಡಿದ್ದಾರೆ. ಅವರು ನಿವೇಶನದ ವಿಚಾರವಾಗಿ ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಬಿಜೆಪಿಯವರು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಅವರು ದೂರಿದರು.
ಈಗ ಆರೋಪ ಮಾಡುತ್ತಿರುವ ಬಿಜೆಪಿ ಕಾಲಾವಧಿಯಲ್ಲಿಯೂ ಮುಡಾದಲ್ಲಿ ಹಗರಣ ನಡೆದಿದೆ. ಇದನ್ನು ಸೇರಿ ತನಿಖೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದು, ಬಿಜೆಪಿ ಈ ರೀತಿಯಾಗಿ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಇನ್ನು ವಾಲ್ಮೀಕಿ ಹಗರಣ ವಿಚಾರವಾಗಿ ಮಾತನಾಡಿ, ಇದು ಬ್ಯಾಂಕ್ ಹಾಗೂ ಕಾರ್ಪೋರೇಷನ್‌ಗೆ ಸಂಬಂಧಿಸಿದ್ದಾಗಿದೆ. ರಾಜ್ಯ ಸರ್ಕಾರ ಕೂಡಾ ಈ ಪ್ರಕರಣವನ್ನು ಎಸ್‌ಐಟಿಗೆ ವಹಿಸಿದ್ದು, ತನಿಖೆ ನಡೆಯುತ್ತಿದೆ. ಈ ಬಗ್ಗೆ ಈಗಲೇ ಹೆಚ್ಚೇನು ಮಾತನಾಡಲಾರೇ ಎಂದು ತಿಳಿಸಿದರು.