ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಇದೇ ಜನವರಿ.21ರಂದು ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಂಧಿ ಭಾರತ ಕಾರ್ಯಕ್ರಮವನ್ನು ಪಕ್ಷ ಈಗಾಗಲೇ ಆರಂಭಿಸಿದ್ದು, ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕಳೆದ ಡಿಸಂಬರ್.26ಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿತ್ತು. ಅಂದು ಸಂಜೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಮರುದಿನದ ಕಾರ್ಯಕ್ರಮಗಳನ್ನು ಮುಂದೂಡಲಾಗಿತ್ತು ಎಂದರು.
ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಮ್ಮ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡಲಾಗಿತ್ತು. ನಮ್ಮ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿಗಳು ಚರ್ಚೆ ಮಾಡಿ ಇದೇ ತಿಂಗಳ 21ರಂದು ಈ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದಾರೆ. 1924ರ ಕಾಂಗ್ರೆಸ್ ಅಧಿವೇಶನದ ಕುರಿತ ಮಾಹಿತಿಗಳ ಪುಸ್ತಕ ಹಾಗೂ ಇತರೆ ಪುಸ್ತಕಗಳನ್ನು ಜ.21ರಂದು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಜನವರಿ.21ರಂದು ಬೆಳಗ್ಗೆ ಸುವರ್ಣಸೌಧದ ಬಳಿ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದ ಶಾಸಕರಿಗೂ ಆಹ್ವಾನ ನೀಡಲಾಗುವುದು. ಅಂದು ಮಧ್ಯಾಹ್ನ 12 ಗಂಟೆಗೆ “ಜೈ ಬಾಪು, ಜೈ ಭೀಮ್, ಜೈ ಸಂವಿಧಾನ” ಎಂಬ ಎಐಸಿಸಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶಕ್ಕೆ ಎಲ್ಲಾ ವಿಧಾನಸಭಾ ಕ್ಷೇತ್ರದಿಂದ ಕನಿಷ್ಠ 100 ಮಂದಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಬೇಕು ಎಂದು ಕರೆ ನೀಡುತ್ತಿದ್ದೇವೆ. ಈ ಸಮಾವೇಶದಲ್ಲಿ ಭಾಗವಹಿಸುವ ನಾಯಕರ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು.





