ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಹೋರಾಟದ ಫಲದಿಂದ ಮೋದಿ ಅವರು ದೇಶದ ಪ್ರಧಾನಿಯಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಂವಿಧಾನ ಅಂಗೀಕಾರದ 75 ವರ್ಷಗಳ ಸ್ಮರಣಾರ್ಥ ಲೋಕಸಭೆಯಲ್ಲಿ ನಡೆದ ಎರಡು ದಿನಗಳ ಚರ್ಚೆಯಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರತಿಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಕಾಂಗ್ರೆಸ್ ಪಕ್ಷದ ಹೋರಾಟದ ಫಲದಿಂದ ಮೋದಿ ಅವರು ದೇಶದ ಪ್ರಧಾನಿಯಾಗಿದ್ದಾರೆ. ಇದನ್ನು ಮೊದಲು ತಿಳಿದುಕೊಳ್ಳಬೇಕು ಎಂದು ಕಿಡಿಕಾರಿದರು.
ಕಾಂಗ್ರೆಸ್ ಪಕ್ಷವು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದೆ. ಸಂವಿಧಾನ, ತ್ರಿವರ್ಣ ಧ್ವಜ, ರಾಷ್ಟ್ರಗೀತೆ ಹಾಗೂ ಪ್ರಜಾಪ್ರಭುತ್ವವನ್ನು ನೀಡಿದ್ದರಿಂದ ಪ್ರಧಾನಿಯಾಗಿ ಸಂಸತ್‌ನಲ್ಲಿ ನೀವು ಭಾಷಣ ಮಾಡಲು ಸಾಧ್ಯವಾಗಿದೆ ಎಂದರು.
ಇನ್ನು ಕೋವಿಡ್ ಹಗರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅವಧಿಯಲ್ಲಿ ಕೋವಿಡ್ ಹಗರಣ ನಡೆದಿದೆ ಎಂಬ ಆರೋಪದ ಮೇಲೆ ಎಫ್‌ಐಆರ್ ಆಗಿದೆ. ಯಾರೇ ತಪ್ಪು ಮಾಡಿದ್ದರೂ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಎಚ್ಚರಿಕೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿಯವರಿಗೆ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಮಾಡುವ ಬಗ್ಗೆ ಆಸಕ್ತಿ ಇಲ್ಲ. ಬಿಜೆಪಿಗೆ ರಾಜಕೀಯ ಬಿಟ್ಟು ಬೇರೆನೂ ಬೇಕಿಲ್ಲ ಎಂದು ವಾಗ್ದಾಳಿ ನಡೆಸಿದರು.