ಬೆಂಗಳೂರು: ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಗೊಳಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಅವರಿಗೆ ಶುಭವಾಗಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾರೈಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಮಾಧ್ಯಮಗಳು ಗೊಂದಲ ಮಾಡಿಕೊಳ್ಳುತ್ತಿವೆ ಎಂದು ವ್ಯಂಗ್ಯವಾಡಿದರು.
ಪೂರ್ಣಾವಧಿ ಮುಖ್ಯಮಂತ್ರಿಯಾಗಿರುವ ವಿಶ್ವಾಸ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ. ನಾನು ಅವರಿಗೆ ಶುಭ ಹಾರೈಸುತ್ತೇನೆ ಎಂದು ಹೇಳಿದರು.
ಈ ಮೊದಲು ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆ ವಿಚಾರವಾಗಿ ಪ್ರಶ್ನೆಗಳು ಕೇಳಿ ಬಂದರೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಡಿ.ಕೆ.ಶಿವಕುಮಾರ್ ಹೇಳುತಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಅದೇ ಅಭಿಪ್ರಾಯಕ್ಕೆ ಧ್ವನಿಗೂಡಿಸುತ್ತಿದ್ದರು.
ಎರಡು ತಿಂಗಳ ಬಳಿಕ ಸಿದ್ದರಾಮಯ್ಯ ಅವರು ಆತವಿಶ್ವಾಸದ ಹೇಳಿಕೆ ನೀಡಿದ್ದು, ಐದು ವರ್ಷ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಮೀರಿದ ಸಂತೋಷ ಸಿದ್ದರಾಮಯ್ಯ ಅವರ ಮುಖದಲ್ಲಿ ಎದ್ದು ಕಾಣುತ್ತಿತ್ತು. ಸಿದ್ದರಾಮಯ ಅವರ ಹೇಳಿಕೆಗೆ ಡಿ.ಕೆ.ಶಿವಕುಮಾರ್ ಅಷ್ಟೇ ತಣ್ಣನೆಯ ಪ್ರತಿಕ್ರಿಯೆ ನೀಡಿದ್ದಾರೆ.





