ಬೆಂಗಳೂರು: ದಲಿತರಿಗೆ ಸೇರಬೇಕಾದ 68 ಎಕರೆ ಜಮೀನು ಹಾಗೂ ನಿವೇಶನಗಳನ್ನು ಡಿ.ಕೆ.ಶಿವಕುಮಾರ್ ಲಪಟಾಯಿಸಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮೈಸೂರು ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಪಾದಯಾತ್ರೆ ಕೈಗೊಂಡಿರುವ ಬಿಜೆಪಿ-ಜೆಡಿಎಸ್ ನಾಯಕರು ಪಾದಯಾತ್ರೆ ಯುದ್ದಕ್ಕೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡುತ್ತಿದ್ದಾರೆ.
ಈ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ದಲಿತರಿಗೆ ಸೇರಬೇಕಾದ 68 ಎಕರೆ ಜಮೀನನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಲಪಟಾಯಿಸಿದ್ದಾರೆ. ಇದಲ್ಲದೇ ದಲಿತರಿಗೆ ಸಿಗಬೇಕಾದ ನಿವೇಶನಗಳನ್ನು ಕೂಡ ಲಪಟಾಯಿಸಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.
ಇನ್ನು ಅಸಲಿ ಸೊಸೈಟಿ ನಕಲಿ ಮಾಡಿ ದಲಿತರ ಭೂಮಿ ಲಪಟಾಯಿಸಿದ್ದಾರೆ. ಇವರ ಬಳಿ ನಾನು ಏನನ್ನೂ ಹೇಳಿಕೊಳ್ಳುವ ಅಗತ್ಯ ಇಲ್ಲ. ನಾನು ಸಿನಿಮಾ ವಿತರಕ ಆಗಿದ್ದಾಗ ಭೂಮಿ ಖರೀದಿಸಿದ್ದೆ. ಸ್ವಲ್ಪವೂ ಯಾರಿಗೂ ಮೋಸ ಮಾಡಲಿಲ್ಲ. ವಂಚನೆ ಮಾಡಿ ಭೂಮಿ ಖರೀದಿಸಿದ್ದರೆ ನಾನು ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಸವಾಲು ಹಾಕಿದರು.
ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ಮುಂದುವರಿಸಿದ ಕುಮಾರಸ್ವಾಮಿ ಅವರು, ಈ ಪಾದಯಾತ್ರೆಯನ್ನು ಅಸೂಯೆಯಿಂದ ಹಮ್ಮಿಕೊಂಡಿದ್ದಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಅಂಗಡಿ ಬಾಗಿಲು ತೆರೆದು ಕುಳಿತಿದೆ. ಗ್ಯಾರಂಟಿಗಳಿಂದ ರಾಜ್ಯವನ್ನು ದರಿದ್ರದತ್ತ ತೆಗೆದುಕೊಂಡು ಹೋಗಿದ್ದಾರೆ. ಮಂತ್ರಿಗಳಲ್ಲಿ ಭ್ರಷ್ಟಾಚಾರ ನಡೆಸಲು ಪೈಪೋಟಿ ನಡೆಯುತ್ತಿದೆ ಎಂದು ಕಿಡಿಕಾರಿದರು.