ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಾಳೆ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ.
ಡಿ.ಕೆ.ಶಿವಕುಮಾರ್ ಅವರು ಮಂಗಳವಾರ(ಫೆಬ್ರವರಿ.25) ದೆಹಲಿಗೆ ತೆರಳಲಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ಅವರನ್ನು ಭೇಟಿಯಾಗಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅಲ್ಲದೇ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ನೆರವು, ಮಹದಾಯಿ, ಮೇಕೆದಾಟು ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಗಳ ಕುರಿತು ಪ್ರಸ್ತಾಪಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಇನ್ನು ರಾಜ್ಯದ ವಿವಿಧ ಕಡೆ ನಿರ್ಮಿಸಲು ಉದ್ದೇಶಿಸಿರುವ ಪಕ್ಷದ ಕಚೇರಿಗಳಿಗೆ ಶಂಕುಸ್ಥಾಪನೆಗೆ ದಿನಾಂಕ ನಿಗಧಿಪಡಿಸುವ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಲಿದ್ದಾರೆ. ಅಲ್ಲದೇ ಆ ಎಲ್ಲಾ ಕಾರ್ಯಕ್ರಮಗಳಿಗೂ ಭಾಗವಹಿಸುವಂತೆಯೂ ಆಮಂತ್ರಣ ನೀಡಲಿದ್ದಾರೆ. ಕಚೇರಿ ಕಟ್ಟಡ ನಿರ್ಮಾಣ ಮಾಡುವ ಸ್ಥಳ ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿ ನೋಂದಣಿ ಆಗಿದ್ದರೆ ಅಲ್ಲಿ ಮಾರ್ಚ್.10 ರಂದು ಶಂಕುಸ್ಥಾಪನೆ ನೆರವೇರಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.