Mysore
27
scattered clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಚುನಾವಣೆ ಮೂಲಕ ಜೆಡಿಎಸ್ ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ನಿರ್ಧಾರ; ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಜೆಡಿಎಸ್ ಕೈಗೊಂಡಿದೆ ಎಂದು ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಆದರೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆ ಆಗಿಲ್ಲ ಎಂದು ಸಚಿವರು ಹೇಳಿದರು.

ಜತೆಗೆ; ಪಕ್ಷದ ದ್ವೈವಾರ್ಷಿಕ ಸಾಂಸ್ಥಿಕ ಚುನಾವಣೆ, ಸದಸ್ಯತ್ವ ಅಭಿಯಾನವನ್ನು ಚುರುಕುಗೊಳಿಸುವುದು, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ತಯಾರಿ ಹಾಗೂ ಪಕ್ಷ ಸಂಘಟನೆ ವಿಷಯಗಳ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದರು.

ಮುಖಂಡರ ಸಭೆಯ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮುಂದಿನ ಏಪ್ರಿಲ್ ಒಳಗೆ ರಾಜ್ಯದ ಘಟಕದ ಅಧ್ಯಕ್ಷ ಸ್ಥಾನವನ್ನು ಚುನಾವಣೆ ಮೂಲಕ ಆಯ್ಕೆ ಮಾಡುವ ತೀರ್ಮಾನ ಆಗಿದೆ. ಪಕ್ಷದ ಸಂಘಟನೆ ಬಗ್ಗೆ ಪಕ್ಷದ ನಾಯಕರಿಗೆ ಕಠಿಣವಾಗಿಯೇ ಹೇಳಿದ್ದೇನೆ. ಯಾರು ಪ್ರಾಮಾಣಿಕವಾಗಿ ಪಕ್ಷದ ಸಂಘಟನೆಗೆ ದುಡಿಯುತ್ತಾರೋ ಅಂಥವರಿಗೆ ಆದ್ಯತೆ ಕೊಡುತ್ತೇವೆ. ನಾನು ಕೂಡ ಪಕ್ಷ ಸಂಘಟನೆಯಲ್ಲಿ ನಿಯಮಿತವಾಗಿ ತೊಡಗಿಸಿಕೊಳ್ಳುತ್ತೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾದ ಮೇಲೆ ರಾಜ್ಯದಲ್ಲಿ ನಾಯಕತ್ವ ಶೂನ್ಯ ಉಂಟಾಗಿದೆ ಎಂದು ಹೇಳಲಾಗುತ್ತಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು; ವಾರದಲ್ಲಿ ನಾಲ್ಕು ದಿನ ನವದೆಹಲಿಯ ಸಚಿವಾಲಯದಲ್ಲಿ ಕೆಲಸ ಮಾಡುತ್ತೇನೆ. ಒಂದು ಅಥವಾ ಎರಡು ದಿನ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವಾಲಯದ ಕಾರ್ಖಾನೆಗಳಿಗೆ ಭೇಟಿ ಕೊಡುತ್ತೇನೆ. ಉಳಿದ ಸಮಯವನ್ನು ಪಕ್ಷದ ಕೆಲಸಕ್ಕೆ ಮಿಸಲಿಡುತ್ತೇನೆ. ಪಕ್ಷದ ಸಂಘಟನೆ, ಸಭೆ, ಪ್ರವಾಸ, ಮಂಡ್ಯ ಕ್ಷೇತ್ರಕ್ಕೆ ಭೇಟಿ ಇತ್ಯಾದಿಗಳ ಬಗ್ಗೆ ವೇಳಾಪಟ್ಟಿ ಸಿದ್ಧ ಮಾಡಿಕೊಂಡಿದ್ದೇನೆ. ಇನ್ನು ಮುಂದೆ ಅದರಂತೆಯೇ ಕೆಲಸ ಮಾಡುತ್ತೇನೆ ಎಂದು ಸಚಿವರು ಹೇಳಿದರು.

ಸಾರ್ವಜನಿಕ ಉದ್ಯಮಿಗಳು ಅಭದಾಯಕವಲ್ಲ ಎನ್ನುವ ಮಾತಿದೆ. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಆ ಕಾರ್ಖಾನೆಗಳು ಲಾಭ ಮಾಡಬಲ್ಲವು ಎಂಬುದನ್ನು ತೋರಿಸುತ್ತೇನೆ ಎಂದು ಕುಮಾರಸ್ವಾಮಿ  ಒತ್ತಿ ಹೇಳಿದರು.

Tags:
error: Content is protected !!