ಬೆಂಗಳೂರು: ಬಾಹ್ಯಾಕಾಶ ವಾಸದ ಬಳಿಕ ಭೂಮಿಗೆ ಮರಳಿರುವ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಇಸ್ರೋ, ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಭೂಮಿಗೆ ಮರಳಿದ ನಂತರ ಅವರಿಗೆ ಪ್ರಾಥಮಿಕ ಆರೋಗ್ಯ ಪರೀಕ್ಷೆ ನಡೆಸಲಾಯಿತು.
ಮೈಕ್ರೋಗ್ರಾವಿಟಿಯ ಅಡ್ಡ ಪರಿಣಾಮಗಳ ಬಗ್ಗೆ ಹೃದಯ ರಕ್ತನಾಳ ಪರೀಕ್ಷೆ, ಸ್ನಾಯು ಮತ್ತು ಮೂಳೆ ಪರೀಕ್ಷೆ ಮತ್ತು ಮನೋಪರೀಕ್ಷೆಗಳನ್ನು ನಡೆಸಲಾಯಿತು. ಈ ವೇಳೆ ಯಾವುದೇ ತೊಂದರೆಗಳು ಕಾಣಿಸಿಕೊಂಡಿಲ್ಲ. ಎಲ್ಲಾ ಗಗನಯಾತ್ರಿಗಳನ್ನು ಒಂದು ವಾರದ ಪುನಶ್ಚೇತನಕ್ಕೆ ಕಳುಹಿಸಲಾಗಿದೆ ಎಂದು ಹೇಳಿದೆ.
ಹೀಗಾಗಿ ಎಲ್ಲಾ ಯಾತ್ರಿಕರಿಗೆ ಒಂದು ವಾರ ಪುನಶ್ಚೇತನ ಶಿಬಿರ ಹಮ್ಮಿಕೊಳ್ಳಲಾಗಿದ್ದು, ನಂತರದಲ್ಲಿ ಅವರು ಶಿಬಿರದಿಂದ ಹೊರಬಂದು ಸಾರ್ವಜನಿಕರ ಜೊತೆ ಬೆರೆಯಲಿದ್ದಾರೆ ಎಂದು ಇಸ್ರೋ ಮಾಹಿತಿ ನೀಡಿದೆ.
ಇನ್ನು 20 ದಿನಗಳ ಬಾಹ್ಯಾಕಾಶ ಪ್ರಯಾಣದಲ್ಲಿ ಶುಭಾಂಶು ಶುಕ್ಲಾ ಅವರ ತಂಡ 18 ದಿನಗಳ ಕಾಲ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದರು. ಅಲ್ಲಿ ಸುಮಾರು 60ಕ್ಕೂ ಹೆಚ್ಚು ಪ್ರಯೋಗಗಳನ್ನು ನಡೆಸಿದರು.





