ಬೆಂಗಳೂರು : ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ದೂರು ದಾಖಲಿಸಿಕೊಂಡಿದೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಬಂಧಿಸುವ ವೇಳೆ ಪೊಲೀಸರು ಆಕೆಯ ಮೇಲೆ ಹಲ್ಲೆ ನಡೆಸಿ, ಬಟ್ಟೆಗಳನ್ನು ವಿವಸ್ತ್ರಗೊಳಿಸಿದ್ದರೆಂಬುದರ ಬಗ್ಗೆ ಸಾಮಾಜಿಕ ಜಾಲಾತಾಣಗಳಲ್ಲಿ ವಿಡಿಯೋಗಳು ವೈರಲ್ ಆದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯ್ ರಹತ್ಕರ್ ಅವರು ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ.
ಇದು ಮಹಿಳೆಯ ಘನತೆ, ವೈಯಕ್ತಿಕ ಸ್ವಾತಂತ್ರ್ಯ, ಲಿಂಗ ಆಧರಿತ ಹಿಂಸೆಯಿಂದ ರಕ್ಷಣೆಯ ಗಂಭೀರ ಉಲ್ಲಂಘನೆಯಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎ.ಸಲೀಂ ಅವರಿಗೆ ಪತ್ರ ಬರೆದಿದ್ದಾರೆ.
ಒಂದು ವೇಳೆ ಪ್ರಕರಣ ಕುರಿತು ಎಫ್‍ಐಆರ್ ದಾಖಲಾಗದಿದ್ದರೆ ವಿಡಿಯೋ ಸಾಕ್ಷ್ಯಗಳ ಪರಿಶೀಲನೆ ಸೇರಿದಂತೆ ನ್ಯಾಯಯುತ ನಿಷ್ಪಕ್ಷಪಾತ ತನಿಖೆಯನ್ನು ನಡೆಸಬೇಕೆಂದು ಸೂಚಿಸಿದ್ದಾರೆ.
ದುಷ್ಕತ್ಯ ಕಂಡುಬಂದಲ್ಲಿ ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಮತ್ತು ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಬೇಕು. ಘಟನೆಯಿಂದ ಮಾನಸಿಕವಾಗಿ ಕುಗ್ಗಿರುವ ಮಹಿಳೆಗೆ ವೈದ್ಯಕೀಯ ನೆರವು, ಮಾನಸಿಕ ಬೆಂಬಲ, ಪುನರ್ ವಸತಿ ಸೇರಿದಂತೆ ಪರಿಹಾರವನ್ನು ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ.
ಪೊಲೀಸ್ ಇಲಾಖೆ ಈವರೆಗೂ ಪ್ರಕರಣ ಕುರಿತು ತೆಗೆದುಕೊಂಡಿರುವ ವಿವರವಾದ ಕ್ರಮಗಳನ್ನು ಐದು ದಿನದೊಳಗೆ ಆಯೋಗಕ್ಕೆ ಸಲ್ಲಿಸಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರದಲ್ಲಿ ಅಧ್ಯಕ್ಷರು ಮನವಿ ಮಾಡಿದ್ದಾರೆ.




