ಬೆಂಗಳೂರು: ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಿಜೆಪಿಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ʼಎಕ್ಸ್ʼ ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಅವರು, ಅಡುಗೆ ಅನಿಲ ಬೆಲೆ, ಪೆಟ್ರೋಲ್, ಡೀಸೆಲ್ ಮೇಲೆ ಕೇಂದ್ರ ಸರ್ಕಾರ ಅಬಕಾರಿ ಸುಂಕ ಹೆಚ್ಚಿಸುವ ಮೂಲಕ ನಿಮಗೆ ಕಪಾಳ ಮೋಕ್ಷ ಮಾಡಿದೆ. ಈ ಜನಾಕ್ರೋಶ ಯಾತ್ರೆಯನ್ನು ಕೇಂದ್ರದ ವಿರುದ್ಧ ಮಾಡಬೇಕು ಎಂದು ನಾನು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಬೆಲೆ ಏರಿಕೆ ವಿಷಯವಾಗಿ 16 ದಿನಗಳ ಜನಾಕ್ರೋಶ ಯಾತ್ರೆ ಮಾಡುತ್ತಿದ್ದೀರಿ. ನಿಮಗೆ ಶುಭಾಶಯ ತಿಳಿಸುತ್ತೇನೆ. ಇದನ್ನೇ ನಿಮ್ಮದೇ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮುಂದುವರಿಸಬೇಕು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.





