Mysore
27
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ರದ್ದತಿಗೆ ಸುಪ್ರೀಂಕೋರ್ಟ್‌ ನಕಾರ

ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಪಡಿಸಲು ಸುಪ್ರಿಂಕೋರ್ಟ್‌ ನಿರಾಕರಿಸಿದೆ.

ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಡಿಕೆಶಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಈ ಮನವಿಯನ್ನು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಬೇಲಾ ತ್ರಿವೇದಿ ಪೀಠ ತಿರಸ್ಕರಿಸಿದೆ. ಕರ್ನಾಟಕ ಹೈಕೋರ್ಟ್‌ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಪ್ರಕರಣ ರದ್ದುಗೊಳಿಸುವ ಸಂಬಂಧ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು 2023ರ ಅಕ್ಟೋಬರ್.‌19ರಂದು ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿತ್ತು. ಈ ಆದೇಶದ ವಿರುದ್ಧ ಶಿವಕುಮಾರ್‌ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬೇಲಾ ತ್ರಿವೇದಿ ಪೀಠ ಪ್ರಕರಣವನ್ನು ರದ್ದುಪಡಿಸಲು ನಿರಾಕರಿಸಿದ್ದು ಮಾತ್ರವಲ್ಲದೇ ಮೂರು ತಿಂಗಳಿಗೊಮ್ಮೆ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶನ ನೀಡಿದೆ.

ಡಿಕೆಶಿ ಅವರು ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದಾಗ 2013ರ ಏಪ್ರಿಲ್‌ 1ರಿಂದ 2018ರ ಏಪ್ರಿಲ್‌ 30ರ ಅವಧಿಯಲ್ಲಿ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ. 74.93 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.

2017ರಲ್ಲಿ ಶಿವಕುಮಾರ್‌ ಮನೆ ಮತ್ತು ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧ ಕಾರ್ಯಾಚರಣೆಗಳ ಆಧಾರದ ಮೇಲೆ, ಜಾರಿ ನಿರ್ದೇಶನಾಲಯ ಕೂಡ ಡಿಕೆಶಿ ವಿರುದ್ಧ ತನಿಖೆ ಪ್ರಾರಂಭಿಸಿತ್ತು. ಇಡಿ ತನಿಖೆಯ ಆಧಾರದ ಮೇಲೆ ಸಿಬಿಐ ಅವರ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ರಾಜ್ಯ ಸರ್ಕಾರವು 2019ರ ಸೆಪ್ಟೆಂಬರ್‌ 25ರಂದು ಅನುಮತಿ ನೀಡಿತ್ತು. ಅದರಂತೆ, ಡಿಕೆಶಿ ವಿರುದ್ಧ ಸಿಬಿಐ 2020ರ ಅಕ್ಟೋಬರ್‌.3ರಂದು ಎಫ್‌ಐಆರ್‌ ದಾಖಲಿಸಿತ್ತು.

 

Tags: