ಬೆಂಗಳೂರು: ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅವಕಾಶ ನೀಡಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ಬಳಿ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು ತಲೆದೋರಿದೆ ಎಂಬುದರ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ “ಇಲ್ಲಿಯ ತನಕ ಬೆಂಗಳೂರಿನಲ್ಲಿ ಯಾವುದೇ ರೀತಿಯ ನೀರಿನ ಬಿಕ್ಕಟ್ಟೂ ಸಹ ತಲೆ ದೋರಿಲ್ಲ. 7000 ಬೋರ್‌ವೆಲ್‌ಗಳು ಬತ್ತುಹೋಗಿವೆ. ಅವುಗಳಿಗೆ ಪರ್ಯಾಯ ವ್ಯವಸ್ಥೆಯನ್ನು ನಾವು ಮಾಡಿದ್ದೇವೆ. ತಮಿಳುನಾಡಿಗೆ ನಾವು ನೀರು ಬಿಡುತ್ತಿದ್ದೇವೆ ಎಂದು ಬಿಜೆಪಿ ಆರೋಪಿಸುತ್ತಿದೆ, ಅದು ಸುಳ್ಳು. ಬಿಡಲು ನೀರು ಸಹ ಇಲ್ಲ. ಹಾಗಾಗಿಯೇ ನಾನು ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದೆ. ಈ ಮೂಲಕ ಪ್ರಧಾನಮಂತ್ರಿಗಳಿಗೆ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅನುಮತಿ ನೀಡಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ” ಎಂದರು.





