ದಾವಣಗೆರೆ: ರಕ್ತದಲ್ಲಿ ಬರೆದು ಕೊಡ್ತೀನಿ, ಮುಂದಿನ ಡಿಸೆಂಬರ್ ಒಳಗೆ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ಚನ್ನಗಿರಿ ಕ್ಷೇತ್ರದ ಕೈ ಶಾಸಕ ಶಿವಗಂಗಾ ಬಸವರಾಜ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷಕ್ಕಾಗಿ ಡಿಕೆ ಶಿವಕುಮಾರ್ ಅವರು ಸಾಕಷ್ಟು ದುಡಿದಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಕ್ಷೇತ್ರ ಗೆದ್ದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಹಾಗೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 9 ಸ್ಥಾನ ಗೆಲ್ಲುವುದಕ್ಕೆ ಡಿಕೆ ಶಿವಕುಮಾರ್ ಅವರ ಶ್ರಮ ಸಾಕಷ್ಟಿದೆ. ಅವರು ಏನೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದರು.
ಈ ಡಿಸೆಂಬರ್‌ನಿಂದ ಮುಂದಿನ 5 ವರ್ಷ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿರುತ್ತಾರೆ. ಅಂದರೆ, ಏಲೂವರೆ ವರ್ಷ ಅವರೇ ಸಿಎಂ ಆಗಿರುತ್ತಾರೆ ಎಂದು ತಿಳಿಸಿದರು.
ಸಚಿವ ಕೆಎನ್ ರಾಜಣ್ಣ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅವರ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಆಗುತ್ತಿದೆ. ಹೈಕಮಾಂಡ್ ಇದನ್ನು ಗಮನಿಸಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.





