ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಬಿ.ನಾಗೇಂದ್ರಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ.
ಶಾಸಕ ಬಿ.ನಾಗೇಂದ್ರ ಆಪ್ತರ ಮನೆ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದು ಬೆಳಿಗ್ಗೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ ಎರ್ರಿ ಸ್ವಾಮಿ, ವಿಜಯ್ ಕುಮಾರ್ ಸೇರಿದಂತೆ ಹಲವು ಆಪ್ತರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಂದು ಮುಂಜಾನೆಯೇ ಇಡಿ ಅಧಿಕಾರಿಗಳು ಬಳ್ಳಾರಿಯ ಹಲವೆಡೆ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಬೆಳಕಿಗೆ ಬಂದ ಬಳಿಕ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದರು. ನಂತರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಸಕ ನಾಗೇಂದ್ರ ನಿವಾಸದ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದರು. ನಾಗೇಂದ್ರ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದ್ದು, ಈಗ ನ್ಯಾಯಾಂಗ ಬಂಧನದಲ್ಲಿರುವ ನಾಗೇಂದ್ರಗೆ ಇಡಿ ಬಿಗ್ ಶಾಕ್ ನೀಡಿದೆ.