ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರ ಅವರನ್ನು ಕೆಳಗಿಳಿಸುವ ಎಲ್ಲಾ ಪ್ರಯತ್ನ ನಡೆಸಲಾಗುತ್ತಿದ್ದು, ಈಗ ನೂತನ ರಾಜ್ಯಾಧ್ಯಕ್ಷ ಆಯ್ಕೆಗೆ ಚುನಾವಣೆ ನಡೆಸುವ ಬಗ್ಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿಕೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು, ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಕುರಿತು ಪ್ರಕ್ರಿಯೆ ಆರಂಭವಾಗಲಿದೆ. ಚುನಾವಣೆ ನಡೆಸಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಬೂತ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಚುನಾವಣೆ ನಡೆಯಲಿದೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ. ಎಲ್ಲರೂ ಸೇರಿ ಚರ್ಚಿಸಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ ಎಂದು ತಿಳಿಸಿದರು.
ಈ ಮೂಲಕ ಕಳೆದ ಕೆಲ ದಿನಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಕೆಳಗಿಳಿಸುವಂತೆ ಬಿಗಿ ಪಟ್ಟು ಹಿಡಿದಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣಕ್ಕೆ ಸಿಹಿಸುದ್ದಿ ಸಿಕ್ಕಿದಂತಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.